ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿಯು ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ ನಗರದ ಹೋಟೆಲ್‌ನಲ್ಲಿ ನಡೆಸುತ್ತಿದ್ದ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆರೋಪಿಸಿದರು.
‘ಪೊಲೀಸರ ಕೇಸು, ಜೈಲಿಗೆ ಹೆದರುವುದಿಲ್ಲ. ಹೆದರಿಸಿ ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ವೇದಿಕೆ ಕಾರ್ಯಕರ್ತರ ಮೇಲೆ ಹೂಡಲಾಗಿರುವ ಸುಳ್ಳು ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂದಕ್ಕೆ ಪಡೆದು, ಅವರನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಚಳವಳಿ ಸಂಘಟಿಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಹಿಂದಿ ಪ್ರಚಾರಕ್ಕೆ ಯಾವುದೇ ಸಂಸ್ಥೆ ಕಾರ್ಯಕ್ರಮ ಮಾಡಲು ಮುಂದಾದರೆ ಅದರ ಪರಿಣಾಮವನ್ನು ಅವರೇ ಎದುರಿಸಬೇಕಾಗುತ್ತದೆ ಎಂದರು.
ನಗರದ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ಅಕ್ರಮ ಪ್ರವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ವೇದಿಕೆಯ 41 ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.