
ಬೆಂಗಳೂರು: ಕೌಟುಂಬಿಕ ಕಲಹದ ಕಾರಣದಿಂದ ಪಿಸ್ತೂಲ್‌ನಿಂದ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಬಳಿಕ ಆರೋಪಿ ಪತಿ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.
ಭುವನೇಶ್ವರಿ (39) ಕೊಲೆಯಾದ ಮಹಿಳೆ. ಬಾಲಮುರುಗನ್ (40) ಬಂಧಿತ ಆರೋಪಿ. ಮಂಗಳವಾರ ಸಂಜೆ 7 ಗಂಟೆಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಭುವನೇಶ್ವರಿ ಅವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬಸವೇಶ್ವರನಗರ ಶಾಖೆಯ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆರೋಪಿಯು ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. 14 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದು, ರಾಜಾಜಿನಗರದಲ್ಲಿ ವಾಸವಾಗಿದ್ದರು. ದಂಪತಿ ಮಧ್ಯೆ ಮನಸ್ತಾಪ ಉಂಟಾಗಿ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.
‘ಆರೋಪಿಯು ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ. ಇದರಿಂದ ನೊಂದಿದ್ದ ಅವರು ವಿಚ್ಛೇದನ ನೀಡುವಂತೆ ಕೇಳಿದ್ದರು. ಆದರೆ, ಇದಕ್ಕೆ ಆರೋಪಿ ಒಪ್ಪಿರಲಿಲ್ಲ. ನಂತರ ಭುವನೇಶ್ವರಿ ಅವರು ಆರು ತಿಂಗಳ ಹಿಂದೆ ತಾವು ಕೆಲಸ ಮಾಡುತ್ತಿದ್ದ ಶಾಖೆಯಿಂದ ಬೇರೆ ಕಡೆಗೆ ವರ್ಗಾವಣೆ ಪಡೆದು ಮಕ್ಕಳೊಂದಿಗೆ ಕೆ.ಪಿ. ಅಗ್ರಹಾರದ ಚೋಳರಪಾಳ್ಯದಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು’ ಎಂದು ವಿವರ ನೀಡಿದರು.
‘ವಾರದ ಹಿಂದೆ ಆರೋಪಿಗೆ ವಿಚ್ಛೇದನದ ನೋಟಿಸ್ ಕಳುಹಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಆರೋಪಿ, ಪತ್ನಿ ಕಚೇರಿಯಿಂದ ಮನೆಗೆ ಬರುವಾಗ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪತ್ನಿ ಕೊಂದ ಬಳಿಕ ಆರೋಪಿಯು ನೇರವಾಗಿ ಮಾಗಡಿ ರಸ್ತೆ ಠಾಣೆಗೆ ಬಂದು, ಗುಂಡು ಹಾರಿಸಿ ಪತ್ನಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಂಡ ಮತ್ತು ವಿಧಿವಿಜ್ಞಾನ ಪ್ರಯೋಗಾಲದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.