ADVERTISEMENT

ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ: ರಾಜ್ಯ, ಕೇಂದ್ರದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 15:27 IST
Last Updated 28 ಜನವರಿ 2026, 15:27 IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು
-ಪ್ರಜಾವಾಣಿ ಚಿತ್ರ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ಭೂಸುಧಾರಣಾ ಕಾಯ್ದೆ–2020ರ ತಿದ್ದುಪಡಿ ರದ್ದು ಪಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಚಂದ್ರಶೇಖರ್ ಬಣ) ನೇತೃತ್ವದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಪ್ರತಿಭಟನಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ವಿದೇಶಗಳಿಂದ ಆಮದು ಆಗುವ ಕುಲಾಂತರಿ ಆಹಾರ ಪದಾರ್ಥಗಳನ್ನು ಕೇಂದ್ರ ಸರ್ಕಾರವು ನಿಷೇಧಿಸಬೇಕು. ಕೃಷ್ಣಾ, ಮೇಕೆದಾಟು, ಮಹದಾಯಿ ಯೋಜನೆಗಳನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಬೇಕು. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳ ಬದಲಾವಣೆಯನ್ನು ಮುಂದಿನ ಮುಂಗಾರು ಮಳೆಗೂ ಮುಂಚೆ ಕಾರ್ಯಗತಗೊಳಿಸಬೇಕು. ಕೃಷಿ ಭೂಮಿಗೆ ಅಪಾಯ ತಂದಿರುವ ಭೂಸ್ವಾಧೀನ ಕಾಯ್ದೆ 2018–19ರ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು. 2013ರ ಭೂಸ್ವಾಧೀನ ಕಾಯ್ದೆಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ರೈತರಿಗೆ ಬೆಳೆ ವಿಮೆ ಪರಿಹಾರ ಸಿಗುತ್ತಿಲ್ಲ. ಪೂರ್ಣ ಪ್ರಮಾಣದಲ್ಲಿ ಪರಿಹಾರ ದೊರೆಯುವಂತೆ ನೋಡಿಕೊಳ್ಳಬೇಕು. ರೈತರಿಗೆ ಅನುಕೂಲ ಆಗುವಂತೆ ಬೆಳೆ ವಿಮೆ ನೀತಿಗೆ ತಿದ್ದುಪಡಿ ತರಬೇಕು ಎಂದು ರೈತರು ಆಗ್ರಹಿಸಿದರು.

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಕಾನೂನಿನ ತೊಡಕು ಎದುರಾಗಿದೆ. ಶೀಘ್ರದಲ್ಲೇ ತಿದ್ದುಪಡಿ ತಂದು ಸಮಸ್ಯೆ ಬಗೆಹರಿಸಬೇಕು ಎಂದು ಕೋರಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ರೈತರ ಸಾಲವನ್ನು ಮನ್ನಾ ಮಾಡಬೇಕು. ಒಂದು ಎಕರೆಗೆ ಕನಿಷ್ಠ 10 ಲಕ್ಷ ಬೆಳೆ ಸಾಲ ನೀಡಬೇಕು. ಯಾವುದೇ ಬಡ್ಡಿ ವಿಧಿಸಬಾರದು ಎಂದು ಆಗ್ರಹಿಸಿದರು.

ಸೌರ ವಿದ್ಯುತ್‌ ಉತ್ಪಾದಿಸಲು ರೈತರಿಗೆ ಉತ್ತೇಜನ ನೀಡಬೇಕು ಎಂದು ಪ್ರತಿಭಟನಕಾರರು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.