ADVERTISEMENT

ಬೆಟ್ಟಹಲಸೂರು–ರಾಜಾನುಕುಂಟೆ ರೈಲ್ವೆ ಯೋಜನೆ: ಭೂಸ್ವಾಧೀನ ಕೈಬಿಡಲು ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 14:17 IST
Last Updated 30 ಜನವರಿ 2026, 14:17 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಬೆಟ್ಟಹಲಸೂರಿನಿಂದ ರಾಜಾನುಕುಂಟೆ ನಡುವೆ ರೈಲು ಮಾರ್ಗ ನಿರ್ಮಾಣ ಮಾಡುವ ವಿಶೇಷ ಯೋಜನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ವಿರೋಧ ವ್ಯಕ್ತಪಡಿಸಿರುವ ರೈತರು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ADVERTISEMENT

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅರಳಾಪುರ ಮಂಜೇಗೌಡ, ‘ದೇವನಹಳ್ಳಿಯಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಿಂಗನಾಯಕನಹಳ್ಳಿ, ತಿಮ್ಮಸಂದ್ರ, ಬೆಟ್ಟಹಲಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ರೈಲ್ವೆ ಯೋಜನೆಗೆ ಭೂಸ್ವಾಧೀನ ಮಾಡಲಾಗುತ್ತಿದೆ. ಇದನ್ನು ಸಣ್ಣ ಮತ್ತು ಅತಿ ಸಣ್ಣ ರೈತರು ವಿರೋಧಿಸಿದ್ದು, ತಮ್ಮ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸ ರೈಲು ಮಾರ್ಗದ ಪ್ರಸ್ತಾವನೆ ಅವೈಜ್ಞಾನಿಕವಾಗಿದ್ದು, ಇದರಿಂದ ಯಾವುದೇ ಉಪಯೋಗವಾಗುವುದಿಲ್ಲ. ಈ ಯೋಜನೆಯನ್ನು ರದ್ದು ಮಾಡಬೇಕು’ ಎಂದು ಒತ್ತಾಯಿಸಿದರು.

‘ಯೋಜನೆಗೆ ಸಂಬಂಧಿಸಿದ ಕಾರ್ಯಗಳಿಗಾಗಿ ಅಧಿಕಾರಿಗಳು ನಿಗದಿತ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದಲ್ಲಿ, ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು. 

ಸಂಘದ ಕಾರ್ಯದರ್ಶಿ ಬೆಟ್ಟಹಲಸೂರು ನಂಜುಂಡಪ್ಪ, ‘ಈ ಯೋಜನೆ ಸಂಬಂಧ ಭೂಸ್ವಾಧೀನ ಪ್ರಕ್ರಿಯೆ ಕೈಗೊಂಡರೆ ನೂರಾರು ರೈತರು ಬೀದಿಪಾಲಾಗುತ್ತಾರೆ. ಈಗಾಗಲೇ ಸಂಕಷ್ಟದಲ್ಲಿರುವ ರೈತರನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಬಾರದು. ರಾಜ್ಯದಾದ್ಯಂತ ಹಲವು ರೈಲ್ವೆ ಯೋಜನೆಗಳು ಎರಡು ಮೂರು ದಶಕಗಳಿಂದ ಬಾಕಿ ಉಳಿದಿದ್ದು, ರೈಲ್ವೆ ಅಧಿಕಾರಿಗಳು ಆ ಯೋಜನೆಗಳನ್ನು ಜಾರಿಗೆ ತರಲು ನಿರಾಸಕ್ತಿ ತೋರುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. 

‘ಬೆಟ್ಟಹಲಸೂರು–ರಾಜಾನುಕುಂಟೆ ನಡುವಿನ ಪ್ರಸ್ತಾವಿತ ಹೊಸ ಮಾರ್ಗದಿಂದ ಆಲದ ಮರ ಸೇರಿದಂತೆ ಅನೇಕ ಅಪರೂಪದ ಮರಗಳು ನಾಶವಾಗಲಿವೆ. ರಾಜಾನುಕುಂಟೆಯು ಯಲಹಂಕ ಜಂಕ್ಷನ್‌ನಿಂದ ಕೇವಲ 6 ಕಿ.ಮೀ. ಅಂತರದಲ್ಲಿ ಇರುವುದರಿಂದ, ಹೊಸ ರೈಲು ಮಾರ್ಗ ನಿರ್ಮಾಣ ಅಗತ್ಯವಿಲ್ಲ’ ಎಂದು ಹೇಳಿದರು. 

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನಂಜುಂಡಪ್ಪ ಕಡತನಮಲೆ, ರಾಜ್ಯ ಸಂಚಾಲಕ ಮಾವಳ್ಳಿಪುರ ಧನರಾಜ್ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.