ADVERTISEMENT

ಬೆಂಗಳೂರು: ರೈತರ ಸಾಲ ಮನ್ನಾ ಮಾಡಲು ಆಗ್ರಹ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2025, 16:08 IST
Last Updated 6 ಮಾರ್ಚ್ 2025, 16:08 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು
ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್   

ಬೆಂಗಳೂರು: ರೈತರ ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು.

ರೈತರ ಸಮಸ್ಯೆಗಳನ್ನು ಬಗೆಹರಿಸಲು ರೈತ ಕೃಷಿ ಪರಿಷತ್ ರೂಪಿಸಬೇಕು. ಪ್ರತಿ ಕೆ.ಜಿ. ರೇಷ್ಮೆಗೆ ಕನಿಷ್ಠ ₹ 1 ಸಾವಿರ ಬೆಲೆ ನಿಗದಿ ಮಾಡಬೇಕು. ಪಶುಪಾಲಕರಿಗೆ ಹಾಲಿನ ಪ್ರೋತ್ಸಾಹ ಧನ ಸುಮಾರು ₹ 700 ಕೋಟಿ ಹಣ ಬಿಡುಗಡೆ ಮಾಡಿ, ಲೀಟರ್‌ ಹಾಲಿಗೆ ಕನಿಷ್ಠ ₹55 ಬೆಲೆ ನಿಗದಿಪಡಿಸಬೇಕು ಎಂದರು.

ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ  ಹತ್ತು ಗಂಟೆ 3 ಫೇಸ್‌ ವಿದ್ಯುತ್ ನೀಡಬೇಕು ಮತ್ತು ತೋಟದ ಮನೆಗಳಿಗೆ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸಬೇಕು. ಬಗರ್ ಹುಕುಂ ಸಾಗುವಳಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿಲ್ಲಿಸಿ, 12 ವರ್ಷದಿಂದ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಅತಿವೃಷ್ಟಿ, ಅನಾವೃಷ್ಟಿ, ಪ್ರಾಣಿಗಳ ಉಪಟಳದಿಂದ ಆದ ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ರಾಜ್ಯದ ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಭೂಸ್ವಾಧೀನ ಅವಶ್ಯಕತೆ ಇದ್ದರೆ ಜಂಟಿ ಪಾಲುದಾರಿಕೆಯಲ್ಲಿ ಉದ್ಯಮ ಆರಂಭಿಸಿ, ಶೇಕಡ 50:50 ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ಜಮೀನು ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿ ಅಧ್ಯಕ್ಷೆ ಪಚ್ಚೆ ನಂಜುಂಡಸ್ವಾಮಿ, ರಾಜ್ಯ ಅಧ್ಯಕ್ಷ ವಿ.ಆರ್.ನಾರಾಯಣರೆಡ್ಡಿ, ಚೂನಪ್ಪ ಪೂಜೇರಿ, ಕಾರ್ಯಾಧ್ಯಕ್ಷ ಟಿ.ಆರ್. ವಿದ್ಯಾಸಾಗಾರ್,  ಶ್ರೀನಿವಾಸ್ ಪಾಲ್ಗೊಂಡಿದ್ದರು.

ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಈಡೇರಿಸಲು ಕ್ರಮ ವಹಿಸಲಾಗುವುದು.
ಸಂತೋಷ್ ಲಾಡ್ ಕಾರ್ಮಿಕ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.