ADVERTISEMENT

ಪಿಂಚಣಿಗೆ ಒತ್ತಾಯಿಸಿ ನಾಳೆಯಿಂದ ಉಪವಾಸ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 19:29 IST
Last Updated 2 ಜನವರಿ 2021, 19:29 IST

ಬೆಂಗಳೂರು: ಅನುದಾನಿತ ವಿದ್ಯಾಸಂಸ್ಥೆಗಳ ನೌಕರರ ಪಿಂಚಣಿಗಾಗಿ ಒತ್ತಾಯಿಸಿಕರ್ನಾಟಕ ರಾಜ್ಯ ಅನುದಾನಿತ ಶಾಲಾ–ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘವು ಇದೇ 4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.

‘ರಾಜ್ಯದಅನುದಾನಿತ ವಿದ್ಯಾಸಂಸ್ಥೆಗಳಲ್ಲಿ 2006ರ ನಂತರ ನೇಮಕ ಹೊಂದಿ, ವೇತನ ಪಡೆಯುತ್ತಿರುವ ಹಾಗೂ ಮೊದಲೇ ನೇಮಕಗೊಂಡು ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಪಿಂಚಣಿ ಸೌಲಭ್ಯ ಇಲ್ಲ. 40 ಸಾವಿರ ನೌಕರರ ಪೈಕಿ 2 ಸಾವಿರಕ್ಕೂಹೆಚ್ಚು ಮಂದಿಪಿಂಚಣಿ ಸೌಲಭ್ಯವಿಲ್ಲದೆ ಈಗಾಗಲೇ ನಿವೃತ್ತಿ ಹೊಂದಿದ್ದಾರೆ’ ಎಂದು ಸಂಘದ ಕಾರ್ಯಾಧ್ಯಕ್ಷಸಿ.ಎಂ.ಶಶಿಧರ್ ಬೇಸರ ವ್ಯಕ್ತಪಡಿಸಿದರು.

‘ಅನೇಕರು ಸೇವೆಯಲ್ಲಿರುವಾಗಲೇ ಅಕಾಲಿಕ ಮರಣ ಹೊಂದಿದ್ದಾರೆ. ಇವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಸೌಲಭ್ಯ ಸಿಕ್ಕಿಲ್ಲ.6ನೇ ವೇತನ ಆಯೋಗವು ಪಿಂಚಣಿ ಸೌಲಭ್ಯ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ನೌಕರರಿಗೆ ವಿವಿಧ ಸೌಲಭ್ಯಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದ್ದರೂ, ಸರ್ಕಾರ ಬೇಡಿಕೆ ಈಡೇರಿಸುತ್ತಿಲ್ಲ’ ಎಂದು ದೂರಿದರು.

ADVERTISEMENT

‘ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಗುಡುವು ನೀಡಿದ್ದರೂ ಬೇಡಿಕೆ ಈಡೇರಿಸಿಲ್ಲ. ಹಾಗಾಗಿ, ಪಿಂಚಣಿ ವಂಚಿತ ನೌಕರರೆಲ್ಲಾ ಒಗ್ಗೂಡಿ, ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಬೇಡಿಕೆ ಈಡೇರಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.