ಜಿಬಿಎ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಅನುಗುಣವಾಗಿ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಜ್ಯದ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣ ಸ್ವಾಮಿ ತಿಳಿಸಿದರು.
ಜಿಬಿಎ ಹಾಗೂ ಐದು ನಗರ ಪಾಲಿಕೆಗಳು ಮತ್ತು 369 ವಾರ್ಡ್‌ಗಳಿಗೆ ಅನುದಾನ ಒದಗಿಸುವ ಕುರಿತಾಗಿ ಎಲ್ಲಾ ಅಂಶಗಳನ್ನು ಒಳಗೊಂಡಂತೆ ಸಲಹೆಗಳನ್ನು ಕ್ರೋಡೀಕರಿಸಿ ಶಿಫಾರಸುಗಳನ್ನು ಒಳಗೊಂಡ ವರದಿ ಸಲ್ಲಿಸಲಾಗುವುದು ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಐದು ನಗರ ಪಾಲಿಕೆಗಳೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದ್ದು, ಕೂಲಂಕಷ ಚರ್ಚೆ ಮೂಲಕ ಸಲಹೆಗಳನ್ನು ಪಡೆಯಲಾಗಿದೆ. ಅದರ ಜೊತೆಗೆ ಸಾಂಕೇತಿಕವಾಗಿ ಕೆಲವು ವಾರ್ಡ್‌ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡಲಾಗಿದೆ ಎಂದು ತಿಳಿಸಿದರು.
ಆಯಾ ನಗರ ಪಾಲಿಕೆಗಳ ಭೌಗೋಳಿಕ, ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಯನ್ನು ಅವಲೋಕಿಸಿ, ಜಿಬಿಎ ಹಾಗೂ ಐದು ನಗರ ಪಾಲಿಕೆಗಳಿಂದ ಲಭ್ಯವಾಗಿರುವ ಸಲಹೆಗಳ ಆಧಾರದಲ್ಲಿ ಶಿಫಾರಸುಗಳನ್ನು ಸಿದ್ಧಪಡಿಸಲಾಗುವುದು ಎಂದರು.
ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಮಾತನಾಡಿ, ‘ಪಶ್ಚಿಮ ನಗರ ಪಾಲಿಕೆಯಲ್ಲಿ 112 ವಾರ್ಡ್‌ಗಳಿದ್ದು, ಬಹುತೇಕ ವಸತಿ ಪ್ರದೇಶಗಳೇ ಇವೆ. ಇಲ್ಲಿ ತೆರಿಗೆ ಸಂಗ್ರಹ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆಯಾ ಪಾಲಿಕೆಗಳಲ್ಲಿ ಸಂಗ್ರಹವಾಗುವ ತೆರಿಗೆಯನ್ನು ಬೇರೆ ಪಾಲಿಕೆಗಳಿಗೆ ಯಾವ ರೀತಿಯಲ್ಲಿ ವರ್ಗಾಯಿಸಬೇಕು ಎಂಬುದನ್ನು ಅವಲೋಕಿಸಲಾಗುತ್ತಿದೆ’ ಎಂದು ಹೇಳಿದರು.
ಹಣಕಾಸು ಆಯೋಗದ ಸದಸ್ಯ ಮೊಹಮ್ಮದ್ ಸನಾವುಲ್ಲಾ ಮಾತನಾಡಿ, ‘ಜಿಬಿಎ ವ್ಯಾಪ್ತಿಯಲ್ಲಿ ರಸ್ತೆಗಳು, ಕೆರೆಗಳು, ವಿದ್ಯುತ್ ದೀಪಗಳು, ಕುಡಿಯುವ ನೀರು ಹಾಗೂ ಸ್ವಚ್ಛತೆ ಸೇರಿದಂತೆ ಐದು ಪ್ರಮುಖ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.