ADVERTISEMENT

ಪ್ರತಿಭಟನೆ; ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌

ಧರ್ಮಗಳ ಜನರ ನಡುವೆ ವೈಷಮ್ಯ ಸೃಷ್ಟಿಸಲು ಯತ್ನ: ಆರೋಪ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 14:12 IST
Last Updated 22 ಡಿಸೆಂಬರ್ 2019, 14:12 IST

ಬೆಂಗಳೂರು: ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಇದರ ನಡುವೆಯೇ ಸರ್ಕಾರಿ ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಮೈದಾನದಲ್ಲಿ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

‘ಕ್ರೈಸ್ಟ್ ಕಾಲೇಜು, ಸೆಂಟ್ರಲ್ ಕಾಲೇಜು ಮತ್ತು ಮೌಂಟ್ ಕಾರ್ಮೆಲ್ ಕಾಲೇಜಿನ ಕೆಲ ವಿದ್ಯಾರ್ಥಿಗಳು ನಿಷೇಧಾಜ್ಞೆ ಉಲ್ಲಂಘಿಸಿ ಅಕ್ರಮ ಕೂಟ ರಚಿಸಿಕೊಂಡು ಪ್ರತಿಭಟನೆ ನಡೆಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹಾಗೂ ಎರಡು ಧರ್ಮಗಳ ಜನರ ನಡುವೆ ವೈಷಮ್ಯ ಸೃಷ್ಟಿಸುವ ಫಲಕಗಳನ್ನು ಪ್ರದರ್ಶಿಸಿದ್ದರು’ ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್‌ಸಿಂಗ್ ರಾಥೋಡ್ ತಿಳಿಸಿದರು.

‘ಪ್ರತಿಭಟನನಿರತ ವಿದ್ಯಾರ್ಥಿಗಳ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರತಿಭಟನೆಯ ವಿಡಿಯೊ ಹಾಗೂ ಫೋಟೊ ಆಧರಿಸಿ ವಿದ್ಯಾರ್ಥಿಗಳನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಹೊರ ರಾಜ್ಯದ ವಿದ್ಯಾರ್ಥಿಗಳು ಭಾಗಿ: ‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು’ ಎಂದು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹೊರ ರಾಜ್ಯಗಳ ವಿದ್ಯಾರ್ಥಿಗಳು ನಗರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಅಂಥ ವಿದ್ಯಾರ್ಥಿಗಳನ್ನು ಪ್ರಚೋದಿಸಿ ಪ್ರತಿಭಟನೆಗೆ ಇಳಿಯುವಂತೆ ಮಾಡಲಾಗಿದೆ. ಪ್ರತಿಭಟನೆಗೆ ಕುಮ್ಮಕ್ಕು ನೀಡಿದವರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

‘ನಗರದ ಜನ ಶಾಂತಿ ಪ್ರಿಯರು.ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ತೀರಾ ಕಡಿಮೆ ಇದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.