ಬೆಂಗಳೂರು: ‘ನಗರ ಪೊಲೀಸರು ಒಂದು ವರ್ಷದ ಅವಧಿಯಲ್ಲಿ ₹50 ಕೋಟಿ ಮೌಲ್ಯದ ನೈಸರ್ಗಿಕ ಹಾಗೂ ಸಿಂಥೆಟಿಕ್ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಂಡಿದ್ದಾರೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಗುರುವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ’ ಉದ್ಘಾಟಿಸಿ ಅವರು ಮಾತನಾಡಿದರು.
‘ಶೈಕ್ಷಣಿಕ ವೀಸಾದ ಅಡಿ ವಿದೇಶದಿಂದ ಬಂದವರು ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ 200 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ. ವರ್ಷದ ಅವಧಿಯಲ್ಲಿ ನಾಲ್ಕು ಸಾವಿರ ಕೆ.ಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.
‘ವಿಶ್ವದಲ್ಲಿ ಮಾದಕ ವಸ್ತುಗಳು ಮತ್ತು ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಆಂದೋಲನ ನಡೆಯುತ್ತಿದೆ. ಡ್ರಗ್ಸ್‌ನಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಡ್ರಗ್ಸ್ ಚಟುವಟಿಕೆ ಮಟ್ಟಹಾಕಲು ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.
‘ಕೆಲವು ರಾಜ್ಯಗಳಲ್ಲಿ ಡ್ರಗ್ಸ್ ಪೆಡ್ಲರ್‌ಗಳ ಆಸ್ತಿ ಮುಟ್ಟುಗೋಲು, ಗೂಂಡಾ ಕಾಯ್ದೆ ಹಾಕುವ ಮೂಲಕ ಕ್ರಮ ಜರುಗಿಸಲಾಗುತ್ತಿದೆ. ಕಳೆದ ಅಧಿವೇಶನದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಡ್ರಗ್ಸ್ ಚಟುವಟಿಕೆ ಮಟ್ಟಹಾಕಲು ಮತ್ತಷ್ಟು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.
‘ರಾಜ್ಯದಲ್ಲಿ 6.50 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗಿದೆ. ಪ್ರತಿ ತಿಂಗಳು ಆಯಾ ಠಾಣೆಯ ಪೊಲೀಸರು ಶಾಲಾ– ಕಾಲೇಜುಗಳಿಗೆ ಭೇಟಿ ನೀಡಿ, ಏನಾಗುತ್ತಿದೆ ಎಂಬುದರ ಕುರಿತು ಮಾಹಿತಿ ಪಡೆಯಬೇಕು. ಪ್ರತಿ ಕಾಲೇಜಿನಲ್ಲಿ ಆ್ಯಂಟಿ ಡ್ರಗ್ಸ್ ಸಮಿತಿ ರಚಿಸುವಂತೆ ಸೂಚಿಸಲಾಗಿದೆ’ ಎಂದರು.
‘ರಾಜ್ಯ ಪೊಲೀಸ್ ಇಲಾಖೆ ಯಾವುದನ್ನೂ ರಾಜೀ ಮಾಡಿಕೊಳ್ಳುವುದಿಲ್ಲ. ಡ್ರಗ್ಸ್ ಚಟುವಟಿಕೆಯ ಕುರಿತು ಮಾಹಿತಿ ಗೊತ್ತಾದ ಕೂಡಲೇ ಸಾರ್ವಜನಿಕರು ಕ್ಯೂಆರ್ ಕೋಡ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಬೇಕು. ಅಕ್ರಮ ಚಟುವಟಿಕೆಗಳು ನಿಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿ ಕಂಡು ಬಂದರೆ ತಿಳಿಸಬೇಕು’ ಎಂದು ಹೇಳಿದರು.
ಬೆಂಗಳೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿರುವ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ನಾಶಪಡಿಸಲು ಗೃಹ ಸಚಿವರು ಇದೇ ವೇಳೆ ಆನ್‌ಲೈನ್ ಮೂಲಕ ಚಾಲನೆ ನೀಡಿದರು.
ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತು ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮಹಾಂತಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಆದರ್ಶ ಗ್ರೂಪ್‌ನ ಸಿಎಂಡಿ ಬಿ.ಎಂ.ಜಯಶಂಕರ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಇದೆ. ಮಾದಕ ವ್ಯಸನಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬೇಡಿ– ಜಿ.ಪರಮೇಶ್ವರ್ ಗೃಹ ಸಚಿವ
‘ರಕ್ಷಾ’ ಕ್ಯೂ–ಆರ್ ಕೋಡ್ ಬಿಡುಗಡೆ
ಮಾದಕ ವಸ್ತುಗಳ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬಹುದಾದ ‘ರಕ್ಷಾ’ ಕ್ಯೂ–ಆರ್ ಕೋಡ್ ಅನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಡ್ರಗ್ಸ್ ಬಳಕೆಯಿಂದ ಆಗುವ ದುಷ್ಪರಿಣಾಮದ ಕುರಿತು ಬೆಂಗಳೂರು ನಗರ ಪೊಲೀಸರೊಂದಿಗೆ ಜತೆಗೂಡಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಸಚಿವ ಜಿ.ಪರಮೇಶ್ವರ ಅವರು ಪ್ರಶಸ್ತಿ ನೀಡಿ ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.