ADVERTISEMENT

ಗಾಂಜಾ: ಮಗ ಬಂಧನ, ತಂದೆ ಪರಾರಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 17:25 IST
Last Updated 16 ಏಪ್ರಿಲ್ 2022, 17:25 IST

ಬೆಂಗಳೂರು: ನಗರದಲ್ಲಿ ವ್ಯವಸ್ಥಿತವಾಗಿ ಗಾಂಜಾ ಮಾರುತ್ತಿದ್ದ ತಂದೆ– ಮಗನ ಕೃತ್ಯವನ್ನು ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು ಪತ್ತೆ ಮಾಡಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತಮಿಳುನಾಡಿನ ಸಾದಿಕ್ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ತಂದೆ ಅಮೀರ್ ತಲೆಮರೆಸಿಕೊಂಡಿದ್ದಾರೆ.

‘ಏಪ್ರಿಲ್ 12ರಂದು ಬೆಳಿಗ್ಗೆ ಆರೋಪಿ ಸಾದಿಕ್, ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ. ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದು ವಿಚಾರಿಸಲಾಯಿತು. ಆತನ ಬಳಿ 5 ಕೆ.ಜಿ 360 ಗ್ರಾಂ ಗಾಂಜಾ ಸಿಕ್ಕಿತ್ತು’ ಎಂದು ಪೊಲೀಸರು ಹೇಳಿದರು.

ADVERTISEMENT

‘ತಂದೆ ಜೊತೆ ಸೇರಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಸಂಗತಿಯನ್ನು ಆರೋಪಿ ಬಾಯ್ಬಿಟ್ಟಿದ್ದ. ಸ್ಥಳವೊಂದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಾಂಜಾ ಸಂಗ್ರಹಿಸಿರುವ ಮಾಹಿತಿ ತಿಳಿಸಿದ್ದ. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ, ₹ 52.50 ಲಕ್ಷ ಮೌಲ್ಯದ 105 ಕೆ.ಜಿ 445 ಗ್ರಾಂ ಗಾಂಜಾ ಪತ್ತೆಯಾಯಿತು. ಅದನ್ನೂ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

‘ಆರೋಪಿಗಳು ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಕೆಲ ಕಾರ್ಮಿಕರು ಗಾಂಜಾ ಖರೀದಿಸುತ್ತಿದ್ದರು. ಬಂಧಿತ ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಾದಿಕ್ ತಂದೆ ಅಮೀರ್ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.