ಬೆಂಗಳೂರು: ನಗರದ ಹೊಸಕೆರೆಹಳ್ಳಿಯ ನಿವಾಸಿ, ಭೂವಿಜ್ಞಾನ ವಿಷಯದ ನಿವೃತ್ತ ಪ್ರಾಧ್ಯಾಪಕ ಬಿ.ಮಹಾಬಲೇಶ್ವರ್ (83) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾದರು.
ಮೃತರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
1942ರ ಜನವರಿ 25ರಂದು ಮಂಗಳೂರಿನಲ್ಲಿ ಜನಿಸಿದ ಮಹಾಬಲೇಶ್ವರ್ ಅವರು, ಮದ್ರಾಸ್‌ನ ರಾಮಕೃಷ್ಣ ಮಿಷನ್ ಶಾಲೆಯಲ್ಲಿ ಪ್ರೌಢಶಿಕ್ಷಣ, ಆಂಧ್ರದ ಅನಂತಪುರದಲ್ಲಿ ಕಾಲೇಜು ಶಿಕ್ಷಣ ಮತ್ತು ತಿರುಪತಿ ಶ್ರೀವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಪದವಿ ಪಡೆದರು. 1970ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದರು.
1962ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೂವಿಜ್ಞಾನ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ ಮಹಾಬಲೇಶ್ವರ್ ಅವರು 35 ವರ್ಷಕ್ಕೂ ಹೆಚ್ಚು ಕಾಲ
ಪ್ರಾಧ್ಯಾಪಕರಾಗಿ, ಸಂಶೋಧಕರಾಗಿ, ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ಮಾಡಿದ್ದರು.
ಸುಮಾರು 20ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು. ಬ್ರಿಟನ್, ಫ್ರಾನ್ಸ್, ಜರ್ಮನಿ, ಜಪಾನ್, ಅಮೆರಿಕ ಸೇರಿದಂತೆ ಅನೇಕ ದೇಶಗಳ ಭೂವಿಜ್ಞಾನಿಗಳೊಂದಿಗೆ ಕೆಲಸ ಮಾಡಿ ವಿಶ್ವಮಟ್ಟದಲ್ಲೂ ಖ್ಯಾತಿ ಪಡೆದಿದ್ದರು.
2002ರಲ್ಲಿ ನಿವೃತ್ತಿಯಾದ ನಂತರವೂ ತಮ್ಮ ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದರು. ಜೊತೆಗೆ, ಜಿಯಾಲಜಿಕಲ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷರಾಗಿ, ಸಂಸ್ಥೆ ಪ್ರಕಟಿಸುವ ನಿಯತಕಾಲಿಕಕ್ಕೆ ಸಂಪಾದಕರಾಗಿ ಕೆಲಸ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.