ADVERTISEMENT

Gold smuggling case | ರನ್ಯಾ ನಿಂದನೆ: ಯತ್ನಾಳ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2025, 19:29 IST
Last Updated 18 ಮಾರ್ಚ್ 2025, 19:29 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಹರ್ಷವರ್ಧಿನಿ ರನ್ಯಾ ರಾವ್ ಅವರನ್ನು ನಿಂದಿಸಿ, ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗಪ್ಪ ರೆಡ್ಡಿ ಲೇಔಟ್‌ ನಿವಾಸಿ ಅಕುಲಾ ಅನುರಾಧ ಅವರ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

‘ವಿಜಯಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಹರ್ಷವರ್ಧಿನಿ ರನ್ಯಾ ಅವರು ಯಾರ ಜತೆ ಸಂಬಂಧ ಹೊಂದಿದ್ದಾರೆ, ಎಲ್ಲಿಂದ ಚಿನ್ನ ತಂದರು ಎಂಬ ಮಾಹಿತಿ ತೆಗೆದುಕೊಂಡಿದ್ದೇನೆ’ ಎಂದು ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದರು. ಅಲ್ಲದೇ ರನ್ಯಾ ಬಗ್ಗೆ ಅಸಭ್ಯವಾಗಿ ಹೇಳಿಕೆ ನೀಡಿದ್ದಾರೆ. ಕನ್ನಡ, ತಮಿಳು, ತೆಲುಗು ಭಾಷೆಯ ಚಿತ್ರಗಳಲ್ಲಿ ನಟಿಸಿರುವ ನಟಿಯ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ಹೇಳಿಕೆ ನೀಡಿರುವ ಯತ್ನಾಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅಕುಲಾ ಅನುರಾಧ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT