ADVERTISEMENT

ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭಕ್ಕೆ ಪ್ರಸ್ತಾವ

ಗ್ರಾಮೀಣ ಪ್ರದೇಶದಲ್ಲಿನ ತಾರತಮ್ಯ ಕೊನೆಗಾಣಿಸಲು ಸಮಾಜ ಕಲ್ಯಾಣ ಇಲಾಖೆ ಯೋಜನೆ

ಅಕ್ರಂ ಮೊಹಮ್ಮದ್
Published 15 ನವೆಂಬರ್ 2020, 21:23 IST
Last Updated 15 ನವೆಂಬರ್ 2020, 21:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದ ಕ್ಷೌರದಂಗಡಿಗಳಲ್ಲಿಡೆಯುವ ಜಾತಿ ಆಧಾರಿತ ತಾರತಮ್ಯದ ಪ್ರಕರಣಗಳನ್ನು ಕೊನೆಗಾಣಿಸುವ ಉದ್ದೇಶದಿಂದ ಸರ್ಕಾರದಿಂದ ಕ್ಷೌರದಂಗಡಿ ಆರಂಭಿಸುವ ಪ್ರಸ್ತಾವವನ್ನು ಸಮಾಜ ಕಲ್ಯಾಣ ಇಲಾಖೆ ಮುಂದಿಟ್ಟಿದೆ.

ಕೇರಳದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಕ್ಷೌರ ಮಾಡಲು ನಿರಾಕರಿಸಿದ ಗ್ರಾಮಗಳಲ್ಲಿ ಅಲ್ಲಿನ ಸರ್ಕಾರವೇ ಕ್ಷೌರದಂಗಡಿಗಳನ್ನು ಆರಂಭಿಸಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಕ್ಷೌರದಂಗಡಿಗಳನ್ನು ಆರಂಭಿಸಲು ಅನುಮತಿ ಕೋರಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ.

‘ಹಲವು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಕ್ಷೌರ ಮಾಡಲು ನಿರಾಕರಿಸಲಾಗುತ್ತಿದೆ. ಈ ಕಾರಣಕ್ಕಾಗಿ ದಲಿತರ ಮೇಲಿನ ದೌರ್ಜನ್ಯ ಆರೋಪದಡಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಈ ಸಮಸ್ಯೆ ನಿವಾರಣೆಗೆ ಗ್ರಾಮ ಪಂಚಾಯಿತಿಗಳ ಮೂಲಕ ಕ್ಷೌರದಂಗಡಿ ಆರಂಭಿಸಬಹುದು. ಇದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಮಂಜೂರು ಮಾಡಬಹುದು’ ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.

ADVERTISEMENT

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪ್ರಸ್ತಾವವನ್ನು ಸಲ್ಲಿಸಲಾಗಿದೆ. ಆದರೆ, ಸಭೆಯಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

2019ರಿಂದ ಈಚೆಗೆ ರಾಜ್ಯದ ಗ್ರಾಮೀಣ ಪ್ರದೇಶದ ಹಲವೆಡೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಕ್ಷೌರ ಮಾಡಲು ನಿರಾಕರಿಸಿದ ಪ್ರಕರಣಗಳು ನಡೆದಿವೆ. ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಇತ್ತೀಚೆಗಷ್ಟೆ ಅಂತಹ ಪ್ರಕರಣಗಳು ನಡೆದಿದ್ದವು. ಸರ್ಕಾರದಿಂದ ಕ್ಷೌರದಂಗಡಿ ಆರಂಭದ ಕುರಿತು ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌, ‘ಉತ್ತರ ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಕ್ಷೌರದಂಗಡಿಗಳಲ್ಲಿ ಜಾತಿ ಹೆಸರಿನಲ್ಲಿ ತಾರತಮ್ಯ ನಡೆಯುವುದು ಹೆಚ್ಚು. ಸರ್ಕಾರ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.