ADVERTISEMENT

‘ಇಂದಿರಾ ಕ್ಯಾಂಟೀನ್‌ ಮುಚ್ಚುವ ಹುನ್ನಾರ’–ಕಾಂಗ್ರೆಸ್‌ ಪ್ರತಿಭಟನೆ

ಬಜೆಟ್‌ನಲ್ಲಿ ಅನುದಾನ ಮೀಸಲಿಡದ ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 19:25 IST
Last Updated 16 ಮಾರ್ಚ್ 2021, 19:25 IST
ಕಾಂಗ್ರೆಸ್‌ ಪಕ್ಷದ ವತಿಯಿಂದ ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಯಿತು
ಕಾಂಗ್ರೆಸ್‌ ಪಕ್ಷದ ವತಿಯಿಂದ ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಯಿತು   

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗೆ ರಾಜ್ಯದ 2021–22ನೇ ಸಾಲಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡದಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ‘ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುವ ಹುನ್ನಾರ ನಡೆಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಕಾರ್ಮಿಕ ವಿಭಾಗದ ವತಿಯಿಂದ ಬಿಬಿಎಂಪಿ ಕೇಂದ್ರ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪಕ್ಷದ ಮುಖಂಡ ಎಂ.ಶಿವರಾಜು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬಡವರು, ಕೂಲಿಕಾರ್ಮಿಕರು ಹಸಿವಿನಿಂದ ಬಳಲಾಬಾರದು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ ಸ್ಥಾಪಿಸಿದರು. ದುಡಿಯುವ ವರ್ಗಕ್ಕೆ ಉಪಾಹಾರವನ್ನು ₹ 5ಕ್ಕೆ ಮತ್ತು ಊಟವನ್ನು ₹ 10 ಒದಗಿಸಿದರು. ಲಕ್ಷಾಂತರ ಜನ ಪ್ರತಿದಿನ ಇಂದಿರಾ ಕ್ಯಾಂಟೀನ್‌ನಲ್ಲಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ, ಸರ್ಕಾರ ಈ ಕ್ಯಾಂಟೀನ್‌ಗಳ ನಿರ್ವಹಣೆಗೆ ಅನುದಾನ ನೀಡದೆ ಮುಚ್ಚುವ ಕುತಂತ್ರ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದಾಗ ಆಹಾರದ ಕಿಟ್ ವಿತರಣೆಯಲ್ಲಿ ಮತ್ತು ಆರೋಗ್ಯ ಪರಿಕರಗಳ ಕಿಟ್ ವಿತರಣೆಯಲ್ಲಿ ಅಕ್ರಮ ನಡೆದಿದೆ. ಸೋಂಕು ನಿವಾರಕ ಸಿಂಪಡಣೆ, ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್‌ ಪ್ರಕರಣ ಪತ್ತೆಯಾದ ಪ್ರದೇಶಗಳನ್ನು ಸೀಲ್ ಡೌನ್ ಮಾಡುವ ವಿಚಾರಗಳಲ್ಲಿ ಹಗರಣಗಳು ನಡೆದಿವೆ. ಅವುಗಳ ವೆಚ್ಚಕ್ಕೆ ಕಡಿವಾಣ ಹಾಕದ ಸರ್ಕಾರ ಈಗ ಬಡವರು ತಿನ್ನುವ ಊಟಕ್ಕೂ ಕಲ್ಲು ಹಾಕಲು ಹೊರಡಿದೆ. ಈ ಭ್ರಷ್ಟ ಸರ್ಕಾರದ ವಿರುದ್ಧ ನಗರದ 198ವಾರ್ಡ್‌ಗಳಲ್ಲೂ ಪ್ರತಿಭಟನೆ ಮಾಡಲಿದ್ದೇವೆ’ ಎಂದು ಹೇಳಿದರು.

ADVERTISEMENT

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ‘ಶಾಲಾ ಕಾಲೇಜು ವಿದ್ಯಾರ್ಥಿಗಳು, ಬಡವರು, ಕೂಲಿ ಕಾರ್ಮಿಕರು, ಆಟೊಚಾಲಕರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಕಡಿಮೆ ವೆಚ್ಚದಲ್ಲಿ ಊಟ ಮತ್ತು ಉಪಹಾರ ಸಿಗುತ್ತಿತ್ತು. ಈ ಕ್ಯಾಂಟೀನ್‌ಗಳ ನಿರ್ವಹಣೆಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.

ಬಿಬಿಎಂಪಿಯ ವಿಶೇಷ ಆಯುಕ್ತರಾದ ರಂದೀಪ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಕಾಂಗ್ರೆಸ್ ನಗರ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ ಮತ್ತು ಕಾರ್ಯದರ್ಶಿ ದಿನೇಶ್ ಹಾಗೂ ಮುಖಂಡ ನಾಗರಾಜ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.