ADVERTISEMENT

ಬೆಂಗಳೂರು: ಸರ್ಕಾರಿ ಶಾಲೆಗಳ ಉಳಿವಿಗೆ 50 ಲಕ್ಷ ಸಹಿ ಸಂಗ್ರಹ

ಶಿಕ್ಷಕರ ಹಾಗೂ ಮೂಲಸೌಕರ್ಯ ಕೊರತೆ ನೀಗಿಸಿ: ಮುರಿಗೆಪ್ಪ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 14:35 IST
Last Updated 21 ಆಗಸ್ಟ್ 2025, 14:35 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್‌ ಆರ್ಗನೈಸೇಷನ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್‌ ಆರ್ಗನೈಸೇಷನ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ ಮಣೆ ಹಾಕುವ ಮೂಲಕ ಬಡಮಕ್ಕಳ ಭವಿಷ್ಯವನ್ನು ಹಾಳುಗೆಡವುತ್ತಿರುವ ಸರ್ಕಾರವು, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ಎ.ಮುರಿಗೆಪ್ಪ ಆರೋಪಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸರ್ಕಾರಿ ಶಾಲೆಗಳನ್ನು ರಕ್ಷಿಸಿ, ಬಲಪಡಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ನಡೆದ 50 ಲಕ್ಷ ಸಹಿ ಸಂಗ್ರಹ ಅಭಿಯಾನದ ಸಮಾರೋಪದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂಬ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ, ಸಾಮಾನ್ಯ ಜನರು ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಸಾಧ್ಯವಿಲ್ಲ. ಶಾಲೆಗಳನ್ನು ಮುಚ್ಚದೇ, ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಶಿಕ್ಷಕರ ಹಾಗೂ ಮೂಲಸೌಕರ್ಯಗಳ ಕೊರತೆ ನೀಗಿಸಿ, ದಾಖಲಾತಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಎಐಡಿಎಸ್ಓ ರಾಜ್ಯ ಘಟಕದ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, ‘ದೇಶದ ಎಲ್ಲ ಮಕ್ಕಳಿಗೂ ಶಿಕ್ಷಣ ದೊರಕಬೇಕೆಂದು ಶ್ರಮಿಸಿದ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಕುದ್ಮುಲ್ ರಂಗರಾವ್ ಹಾಗೂ ಈಶ್ವರ ಚಂದ್ರ ವಿದ್ಯಾಸಾಗರ ಅವರ ಚಿಂತನೆಗಳೇ ಈ ಹೋರಾಟದ ಪ್ರೇರಣೆ ಮತ್ತು ಶಕ್ತಿ. ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಹೋರಾಟಕ್ಕೆ ವಿದ್ಯಾರ್ಥಿ ಸಮೂಹ ಮುಂದಾಗಬೇಕು’ ಎಂದು ಕರೆ ನೀಡಿದರು.

ಎಐಡಿಎಸ್ಓ ರಾಜ್ಯ ಘಟಕದ ಅಧ್ಯಕ್ಷೆ ಕೆ.ಎಸ್. ಅಶ್ವಿನಿ ಮಾತನಾಡಿ, ‘ಹಬ್ ಅಂಡ್ ಸ್ಪೋಕ್’ ಹೆಸರಿನಲ್ಲಿ ಶಾಲೆಗಳನ್ನು ವಿಲೀನಗೊಳಿಸುವ ಆದೇಶವನ್ನು ಅಧಿಕೃತವಾಗಿ ವಾಪಸು ಪಡೆಯಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಕೇಂದ್ರ ಕೌನ್ಸಿಲ್ ಕಾರ್ಯದರ್ಶಿ ಶಿಬಾಶಿಶ್ ಪ್ರಹರಾಜ್ ಮಾತನಾಡಿ, ‘ದೇಶದಾದ್ಯಂತ ಕನಿಷ್ಠ ಮೂಲಸೌಕರ್ಯ ಹಾಗೂ ಶಿಕ್ಷಕರ ಕೊರತೆಯಿಂದಾಗಿ ಸಾವಿರಾರು ಸರ್ಕಾರಿ ಶಿಕ್ಷಣ ಸಂಸ್ಥೆಗಳು ನಲುಗುತ್ತಿವೆ’ ಎಂದರು.

ಎಐಡಿಎಸ್ಓ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಸೆಬಾಸ್ಟಿಯನ್ ಮಾತನಾಡಿ, ‘ಶಿಕ್ಷಣದಲ್ಲಿ ವೈಜ್ಞಾನಿಕ ಚಿಂತನೆಯನ್ನು ಕುಂಠಿತಗೊಳಿಸಿ, ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಇಲ್ಲದಂತೆ ಮಾಡಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ ಇಲಾಖೆಯ ನಿರ್ದೇಶಕಿ (ಪ್ರಾಥಮಿಕ ಶಿಕ್ಷಣ) ಅನಿತಾ ನಜಾರೆ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ 50 ಲಕ್ಷ ಜನರ ಸಹಿ ಸಂಗ್ರಹದ ಮನವಿಯನ್ನು ಅವರು ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.