ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸೇರುವ ಉಮೇದಿನಲ್ಲಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಹಿನ್ನಡೆಯಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹94 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿ, ವಂಚಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ನ ಹಾಲಿ ಶಾಸಕರೂ ಆಗಿರುವ ಬಿ. ನಾಗೇಂದ್ರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಮತಿ ನೀಡಿದ್ದಾರೆ. ಇದರಿಂದಾಗಿ ಅವರ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣಾ ಪ್ರಕ್ರಿಯೆ ಆರಂಭವಾಗಲಿದೆ. ಹೀಗಾಗಿ, ಸಂಪುಟ ಸೇರುವ ಅವರ ಕನಸು ಭಗ್ನಗೊಳ್ಳುವ ಸಾಧ್ಯತೆ ಇದೆ.
ನಿಗಮವು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಸಂತನಗರ ಶಾಖೆ ಸೇರಿದಂತೆ ವಿವಿಧೆಡೆಯ ಬ್ಯಾಂಕ್ ಖಾತೆಗಳಲ್ಲಿ ಇರಿಸಿದ್ದ ಹಣವನ್ನು ಎಂ.ಜಿ. ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಅದರಲ್ಲಿನ ₹94 ಕೋಟಿಯನ್ನು ಅಕ್ರಮವಾಗಿ ಹೈದರಾಬಾದ್‌ನ ಸಹಕಾರಿ ಬ್ಯಾಂಕ್ ಒಂದರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. 2024ರ ಫೆಬ್ರುವರಿ 26ರಿಂದ ಮೇ 9ರವರೆಗೆ ಈ ರೀತಿ ನಿಗಮದ ಖಾತೆಯಿಂದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು.
ನಿಗಮದ ಲೆಕ್ಕಪತ್ರ ವಿಭಾಗದ ಅಧೀಕ್ಷಕ ಪಿ. ಚಂದ್ರಶೇಖರನ್ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಸಾವಿಗೂ ಮುನ್ನ ಬರೆದಿದ್ದ ಪತ್ರದಿಂದ ಹಗರಣ ಬಹಿರಂಗವಾಗಿತ್ತು. ಬಳಿಕ ಸಿಐಡಿ ಪೊಲೀಸರು ಮತ್ತು ಸಿಬಿಐ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದವು. ಈ ಎಫ್‌ಐಆರ್‌ಗಳ ಆಧಾರದಲ್ಲಿ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಆರ್ಥಿಕ ಅಪರಾಧ ಪ್ರಕರಣ ವರದಿ (ಇಸಿಐಆರ್) ದಾಖಲಿಸಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಇ.ಡಿ ಅಧಿಕಾರಿಗಳು ಜುಲೈ 12ರಂದು ನಾಗೇಂದ್ರ ಅವರನ್ನು ಬಂಧಿಸಿದ್ದರು. ತನಿಖೆ ಪೂರ್ಣಗೊಳಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಕ್ಷಮ ಪ್ರಾಧಿಕಾರದ (ರಾಜ್ಯಪಾಲರು) ಅನುಮತಿ ಕೋರಿ ತಿಂಗಳ ಹಿಂದೆ ರಾಜಭವನಕ್ಕೆ ಪ್ರಸ್ತಾವ ಸಲ್ಲಿಸಿದ್ದರು.
‘ಇ.ಡಿ ಅಧಿಕಾರಿಗಳು ಸಲ್ಲಿಸಿದ ಪ್ರಸ್ತಾವ ಮತ್ತು ದಾಖಲೆಗಳನ್ನು ಪರಿಶೀಲಿಸಿದ ರಾಜ್ಯಪಾಲರು, ಬಿ. ನಾಗೇಂದ್ರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಶನಿವಾರ (ಏಪ್ರಿಲ್ 5) ಅನುಮತಿ ನೀಡಿದ್ದಾರೆ. ನ್ಯಾಯಾಲಯಕ್ಕೆ ಆರೋಪಪಟ್ಟಿ ಮತ್ತು ದಾಖಲೆಗಳನ್ನು ಸಲ್ಲಿಸಲು ಇ.ಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.