ADVERTISEMENT

250 ಸರ್ಕಾರಿ ಮಾಂಟೆಸ್ಸರಿಗಳಿಗೆ ಚಾಲನೆ

ಬೆಂಗಳೂರು ನಗರದಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಉದ್ಘಾಟಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 18:49 IST
Last Updated 22 ಜುಲೈ 2024, 18:49 IST
ನಗರದ ಪಟ್ಟೆಗಾರಪಾಳ್ಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಚಾಲನಾ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಕ್ಕಳಿಗೆ ಆಟಿಕೆಗಳನ್ನು ನೀಡಿದರು. ಎಂ.ಕೃಷ್ಣಪ್ಪ, ಚನ್ನರಾಜ ಹಟ್ಟಿಹೊಳಿ, ಜಿ.ಸಿ. ಪ್ರಕಾಶ್ ಭಾಗವಹಿಸಿದ್ದರು –ಪ್ರಜಾವಾಣಿ ಚಿತ್ರ
ನಗರದ ಪಟ್ಟೆಗಾರಪಾಳ್ಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಚಾಲನಾ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಕ್ಕಳಿಗೆ ಆಟಿಕೆಗಳನ್ನು ನೀಡಿದರು. ಎಂ.ಕೃಷ್ಣಪ್ಪ, ಚನ್ನರಾಜ ಹಟ್ಟಿಹೊಳಿ, ಜಿ.ಸಿ. ಪ್ರಕಾಶ್ ಭಾಗವಹಿಸಿದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಸಿಗಬೇಕೆಂಬ ಉದ್ದೇಶದಿಂದ ದೇಶದಲ್ಲಿ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭೆ ಕ್ಷೇತ್ರದ ಪ‍ಟ್ಟೆಗಾರಪಾಳ್ಯದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಆರಂಭಿಸಿರುವ ‘ಸರ್ಕಾರಿ ಮಾಂಟೆಸ್ಸರಿ ಪೂರ್ವ ಪ್ರಾಥಮಿಕ ಕೇಂದ್ರ’ಕ್ಕೆ (ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ) ಸೋಮವಾರ ಚಾಲನೆ ನೀಡಿ ಅವರು ಮಾತನಾಡಿರು.

‘ಮಕ್ಕಳ ಆರಂಭಿಕ ಶಿಕ್ಷಣ ಮತ್ತು ಆರೈಕೆಗೆ (ಇಸಿಸಿಇ) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ, ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ’ ಎಂದರು.

ADVERTISEMENT

‘ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಶಿಕ್ಷಣ ಇಲಾಖೆಯಿಂದ ಆರಂಭಿಸುವ ಯೋಜನೆ ಇತ್ತು. ಆದರೆ, ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ’ ಎಂದು ಹೇಳಿದರು.

‘ಸರ್ಕಾರಿ ಮಾಂಟೆಸ್ಸರಿಗಳಲ್ಲಿ ಕನ್ನಡ, ಇಂಗ್ಲಿಷ್ ಎರಡೂ ಮಾಧ್ಯಮಗಳಲ್ಲಿ ಶಿಕ್ಷಣ ನೀಡಲಾಗುವುದು. ಮಕ್ಕಳಿಗೆ ಒಂದು ಜೊತೆ ಸಮವಸ್ತ್ರ, ಒಂದು ಬ್ಯಾಗ್ ಮತ್ತು ಪೆನ್ಸಿಲ್‌ ಬಾಕ್ಸ್ ನೀಡಲಾಗುವುದು. ಮಕ್ಕಳ ಮುಂದಿನ ಶೈಕ್ಷಣಿಕ ಅನುಕೂಲಕ್ಕಾಗಿ ವರ್ಗಾವಣೆ ಪತ್ರ ಕೂಡ ನೀಡಲಾಗುವುದು. ಮಾಂಟೆಸ್ಸರಿಗಳಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧಕರಾಗಿ ಬಳಸಿಕೊಳ್ಳಲಾಗುವುದು’ ಎಂದರು.

‘ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯ 250 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗಿದೆ. ಹಂತ–ಹಂತವಾಗಿ ರಾಜ್ಯದ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಮಾಂಟೆಸ್ಸರಿಗಳನ್ನು ಪ್ರಾರಂಭಿಸಲು ನಮ್ಮ ಇಲಾಖೆ ಸನ್ನದ್ಧವಾಗಿದೆ’ ಎಂದು ತಿಳಿಸಿದರು.

ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜಿ.ಸಿ. ಪ್ರಕಾಶ್, ಇಲಾಖೆಯ ನಿರ್ದೇಶಕ ಎನ್. ಸಿದ್ದೇಶ್ವರ್, ಅಂಗವಿಕಲ ವ್ಯಕ್ತಿಗಳ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.