ADVERTISEMENT

ಹಣಕಾಸು ಸ್ಥಿತಿ ಆಧರಿಸಿ ಗುತ್ತಿಗೆದಾರರ ಬಿಲ್‌ ಪಾವತಿ: ಸಿದ್ದರಾಮಯ್ಯ

ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಭರವಸೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 16:40 IST
Last Updated 3 ಮಾರ್ಚ್ 2025, 16:40 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ರಾಜ್ಯ ಸರ್ಕಾರದ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾಕಿ ಇರುವ ಬಿಲ್‌ನ ಅರ್ಧದಷ್ಟನ್ನು ತಕ್ಷಣ ಪಾವತಿಸಲು ಈ ಬಜೆಟ್‌ನಲ್ಲೇ ಅನುದಾನ ಒದಗಿಸುವಂತೆ ಗುತ್ತಿಗೆದಾರರ ಸಂಘದವರು ಒತ್ತಾಯಿಸಿದ್ದಾರೆ. ಹಾಗೆಲ್ಲಾ ಮಾಡಲು ಸಾಧ್ಯವಾಗುವುದಿಲ್ಲ. ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸಬೇಕಾಗುತ್ತದೆ’ ಎಂದರು.

ADVERTISEMENT

‘ಏಪ್ರಿಲ್ ತಿಂಗಳಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್‌ಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್‌ ಮೊತ್ತ ಹೆಚ್ಚಿದೆ.  ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೆ’ ಎಂದು ಪ್ರಶ್ನಿಸಿದರು.

‘₹50 ಲಕ್ಷದವರೆಗಿನ ಬಿಲ್‌ ಪಾವತಿ’:

‘ಜಲಸಂಪನ್ಮೂಲ ಇಲಾಖೆಯಲ್ಲಿ ನಿರ್ವಹಿಸಲಾಗಿರುವ ಕಾಮಗಾರಿಗಳ ₹50 ಲಕ್ಷದವರೆಗಿನ ಬಿಲ್‌ಗಳನ್ನು ಮಾರ್ಚ್‌ನಲ್ಲೇ ಪಾವತಿಸಲಾಗುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ.

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಜಲಸಂಪನ್ಮೂಲ ಸಚಿವರೂ ಆದ ಡಿ.ಕೆ. ಶಿವಕುಮಾರ್‌, ‘ಇಲಾಖೆಯ ನಾಲ್ಕೂ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ನಿಮ್ಮೊಂದಿಗೆ ಮಾರ್ಚ್‌ 11ರಂದು ಸಭೆ ನಡೆಸಿ, ಭ್ರಷ್ಟಾಚಾರದ ಆರೋಪದ ಬಗ್ಗೆ ಚರ್ಚೆ ನಡೆಸುತ್ತೇನೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸಿದ್ದು, ಶೀಘ್ರವೇ ಈಡೇರಿಸುವ ಭರವಸೆ ನೀಡಿದ್ದಾರೆ. ಏಪ್ರಿಲ್‌ ಅಂತ್ಯದವರೆಗೆ ಕಾದು ನೋಡಲಾಗುತ್ತದೆ. ನಂತರ ನಮ್ಮ ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್‌. ಮಂಜುನಾಥ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.