ಬೆಂಗಳೂರು: ‘ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ₹15,000, ಉಪಾಧ್ಯಕ್ಷರಿಗೆ ₹ 12,000 ಹಾಗೂ ಸದಸ್ಯರಿಗೆ ₹ 10,000 ಮಾಸಿಕ ಗೌರವಧನ ನಿಗದಿಪಡಿಸಬೇಕು’ ಎಂದು ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು. ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
‘ಗ್ರಾಮ ಪಂಚಾಯಿತಿಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಜವಾಬ್ದಾರಿ ನಕ್ಷೆ ರಚಿಸಬೇಕು. ತಂತ್ರಜ್ಞಾನದ ಸೌಲಭ್ಯದೊಂದಿಗೆ ಗ್ರಾಮ ಸಭೆ ಆಯೋಜಿಸಲು ಆಂದೋಲನ ನಡೆಸಬೇಕು. ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹೆಚ್ಚುವರಿ ಡಾಟಾ ಎಂಟ್ರಿ ಆಪರೇಟರ್ ನೇಮಕಕ್ಕೆ ಅವಕಾಶ ನೀಡಬೇಕು. ಬೇಡಿಕೆಗೆ ತಕ್ಕಂತೆ ಎಲೆಕ್ಟ್ರಿಷಿಯನ್ ನೇಮಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
‘ಗ್ರಾ.ಪಂ. ಸದಸ್ಯರಿಗೆ ಉಚಿತ ಬಸ್ ಪಾಸ್ ಹಾಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕು. 15ನೇ ಹಣಕಾಸು ಆಯೋಗದ ಅನುದಾನ ಬಳಕೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ನಿಲ್ಲಬೇಕು. ಕಚೇರಿ ನಿರ್ವಹಣಾ ಕೈಪಿಡಿ ರಚಿಸಬೇಕು. ಸ್ಥಾಯಿ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ನಿಯಮಗಳನ್ನು ರೂಪಿಸಬೇಕು’ ಎಂದು ಒತ್ತಾಯಿಸಿದರು.
‘ಎಲ್ಲ ಆಸ್ತಿಗಳಿಗೆ ಇ–ಸ್ವತ್ತು ದಾಖಲೆ ಸೃಜಿಸಿ ವಿತರಿಸಬೇಕು. ಅರ್ಜಿ ಹಾಕಿದವರಿಗೆ ಮಾತ್ರ ಇ–ಸ್ವತ್ತು ನೀಡುವ ಪದ್ಧತಿ ನಿಲ್ಲಿಸಬೇಕು. ವಿಧಾನಸೌಧ, ಸರ್ಕಾರಿ ಕಚೇರಿಗಳು ಹಾಗೂ ಟೋಲ್‌ಗೇಟ್‌ಗಳಲ್ಲಿ ಸದಸ್ಯರಿಗೆ ಮುಕ್ತ ಪ್ರವೇಶ ಕಲ್ಪಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.