ADVERTISEMENT

ಹಂಪಿ ಕನ್ನಡ ವಿವಿ ಸಮಸ್ಯೆ ಶೀಘ್ರ ಇತ್ಯರ್ಥ: ಸಚಿವ ಅಶ್ವತ್ಥನಾರಾಯಣ ಭರವಸೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 14:36 IST
Last Updated 19 ಡಿಸೆಂಬರ್ 2020, 14:36 IST
ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಿಯೋಗವು ಸಚಿವ ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಿತು. ಕರವೇ ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸಹನಾ ಶೇಖರ್, ಉಪಾಧ್ಯಕ್ಷೆ ಅಶ್ವಿನಿ ಗೌಡ, ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಅಧ್ಯಕ್ಷ ಟಿ.ಎ.ನಾರಾಯಣಗೌಡ, ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್, ವೇದಿಕೆಯ ಸಾಮಾಜಿಕ ಜಾಲತಾಣ ಘಟಕದ ಪ್ರಧಾನ ಸಂಚಾಲಕ ಎಸ್.ಸಿ.ದಿನೇಶ್ ಕುಮಾರ್ ಇದ್ದಾರೆ.

ಬೆಂಗಳೂರು: ‘ಹಂಪಿ ಕನ್ನಡ ವಿಶ್ವವಿದ್ಯಾಲಯವು ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎಚ್‌.ಅಶ್ವತ್ಥನಾರಾಯಣ ಭರವಸೆ ನೀಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದ ನಿಯೋಗವು ಸಚಿವರನ್ನು ಶನಿವಾರ ಭೇಟಿ ಮಾಡಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತು.

ನಿಯೋಗದಲ್ಲಿದ್ದ ಪ್ರಮುಖರ ಜೊತೆ ಮಾತನಾಡಿದ ಸಚಿವರು, ‘ಕೋವಿಡ್ ಕಾರಣದಿಂದಅನುದಾನ ಬಿಡುಗಡೆ ವಿಳಂಬವಾಗಿದೆ. ಪ್ರಸಾರಾಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ವಿಶ್ವವಿದ್ಯಾಲಯಕ್ಕೆ ವರಮಾನ ಇಲ್ಲದಂತಾಗಿದೆ. ಶೀಘ್ರವೇ ಅನುದಾನ ಬಿಡುಗಡೆ ಮಾಡಲಿದ್ದೇವೆ’ ಎಂದರು.

ADVERTISEMENT

ಕನ್ನಡ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಒತ್ತಾಯಿಸಿ ಕರವೇ ಶುಕ್ರವಾರ ಹಮ್ಮಿಕೊಂಡಿದ್ದ ಟ್ವಿಟರ್‌ ಅಭಿಯಾನದ ಕುರಿತು ಉಲ್ಲೇಖಿಸಿದ ಸಚಿವರು, ‘ಕನ್ನಡಿಗರ ಅಹವಾಲುಗಳನ್ನು ಗಮನಿಸಿದ್ದೇನೆ. ಕನ್ನಡ ನಾಡು, ನುಡಿ ಹಿತಾಸಕ್ತಿ ರಕ್ಷಣೆಗೆಸರ್ಕಾರ ಬದ್ಧ’ ಎಂದರು.

‘ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ₹ 6 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಸಿಬ್ಬಂದಿಯ ಬಾಕಿ ವೇತನಗಳನ್ನು ಪಾವತಿಸಬೇಕು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಬೇಕು, ಸ್ಥಗಿತಗೊಂಡಿರುವ ಎಲ್ಲ ಕೋರ್ಸ್‌ಗಳ ಪುನರಾರಂಭಕ್ಕೆ ಕ್ರಮಕೈಗೊಳ್ಳಬೇಕು. ಪ್ರವೇಶಾತಿ ಪ್ರಾರಂಭಿಸಬೇಕು’ ಎಂದು ನಿಯೋಗವು ಸಚಿವರಲ್ಲಿ ಒತ್ತಾಯಿಸಿತು.

‘ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಬೇಕು, ದೂರಶಿಕ್ಷಣ ಕೋರ್ಸ್‌ಗಳನ್ನು ಪುನರಾರಂಭಿಸಬೇಕು. ವಿಶ್ವವಿದ್ಯಾಲಯದ ಆಡಳಿತ ಯಂತ್ರ ಚುರುಕುಗೊಳಿಸಬೇಕು’ ಎಂದೂ ಮನವಿ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.