ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ಗಳನ್ನು ಮರು ವಿಂಗಡಣೆ ಮಾಡಿ, ಗಡಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 368 ವಾರ್ಡ್‌ಗಳಿವೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024 (ಜಿಬಿಜಿಎ) ಅಡಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (ಜಿಬಿಎ) ಸೆಪ್ಟೆಂಬರ್ 2ರಂದು ರಚಿಸಲಾಗಿತ್ತು. ಜಿಬಿಎ ವ್ಯಾಪ್ತಿಯಲ್ಲಿ ಹಿಂದಿನ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 198 ವಾರ್ಡ್‌ಗಳನ್ನು ಹಂಚಿಕೆ ಮಾಡಿ ಐದು ನಗರ ಪಾಲಿಕೆಗಳನ್ನು ರಚಿಸಿ, ಗಡಿ ನಿಗದಿ ಮಾಡಿ ಅಂದೇ ಅಧಿಸೂಚನೆ ಹೊರಡಿಸಲಾಗಿತ್ತು.
ಐದು ನಗರ ಪಾಲಿಕೆಗಳ ವಾರ್ಡ್‌ಗಳನ್ನು ಮರು ವಿಂಗಡಿಸಲು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ನೇತೃತ್ವದಲ್ಲಿ ‘ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗ’ವನ್ನು ರಚಿಸಿ, ಸೆಪ್ಟೆಂಬರ್ 23ರಂದು ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಆಯೋಗ ಒಂದು ವಾರ ತಡವಾಗಿ, ಸೆ. 30ರಂದು ವರದಿ ಸಲ್ಲಿಸಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024ರ ಪ್ರಕರಣ 29ರ ಉಪ ಪ್ರಕರಣ (1) ಮತ್ತು (3)ರ ಅನ್ವಯ ವಾರ್ಡ್‌ಗಳ ಪುನರ್ ವಿಂಗಡಣೆ ಮಾಡಿ, ಸಲ್ಲಿಸಲಾಗಿದ್ದ ವಾರ್ಡ್ ಮರು ವಿಂಗಡಣೆಯ ವರದಿಯನ್ನು ಸರ್ಕಾರ ಒಪ್ಪಿದೆ. ಜಿಬಿಜಿಎ ಕಾಯ್ದೆಯ 29ರಲ್ಲಿ ಪ್ರದತ್ತವಾದ ಅಧಿಕಾರದನ್ವಯ 2011ರ ಜನಗಣತಿಯ ಆಧಾರದಲ್ಲಿ, ಗ್ರೇಟರ್ ಬೆಂಗಳೂರು ಪ್ರದೇಶದ ಐದು ನಗರ ಪಾಲಿಕೆಗಳಲ್ಲಿ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.
ಯಾವುದೇ ಆಕ್ಷೇಪ/ ಸಲಹೆಗಳಿದ್ದರೆ ಸಾರ್ವಜನಿಕರು ತಮ್ಮ ಪೂರ್ಣ ವಿಳಾಸ, ಸಹಿಯೊಂದಿಗೆ ಸೂಕ್ತ ಕಾರಣ–ವಿವರಣೆಗಳೊಂದಿಗೆ ಲಿಖಿತ ರೂಪದಲ್ಲಿ ‘ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 436, 4ನೇ ಮಹಡಿ, ವಿಕಾಸ ಸೌಧ, ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು– 560001’ ಇವರಿಗೆ ಅಕ್ಟೋಬರ್ 15ರ ಸಂಜೆ 5ರೊಳಗೆ ಸಲ್ಲಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ತಿಳಿಸಿದೆ.
ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಆಕ್ಷೇಪಣೆ/ ಸಲಹೆಗಳನ್ನು ಪರಿಶೀಲಿಸಿ, ನಗರ ಪಾಲಿಕೆಗಳ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಅಂತಿಮಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.