
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಟ್ಟಡ
ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಜೂನ್ 30ರೊಳಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದರು.
ಐದು ನಗರ ಪಾಲಿಕೆಗಳ 369 ವಾರ್ಡ್‌ಗಳ ಮತದಾರರ ಕರಡು ಪಟ್ಟಿಯನ್ನು ಮಂಗಳವಾರ ಪ್ರಕಟಿಸಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ಆದೇಶದಂತೆ ಚುನಾವಣೆ ನಡೆಯಲಿದೆ’ ಎಂದರು.
‘ಮತದಾರರ ಕರಡು ಪಟ್ಟಿಯಲ್ಲಿ ಹೆಸರಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಹೆಸರಿಲ್ಲದಿದ್ದರೆ ಕೂಡಲೇ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವ ಅವಕಾಶವಿದೆ. 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬಹುದು’ ಎಂದು ತಿಳಿಸಿದರು.
2025ರ ಅಕ್ಟೋಬರ್ 1ರ ಮಾಹಿತಿಯಂತೆ ಮತದಾರರ ಕರಡು ಪಟ್ಟಿ ತಯಾರಿಸಲಾಗಿದೆ. ಜ.20ರಿಂದ ಫೆಬ್ರುವರಿ 3ರವರೆಗೆ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹಕ್ಕು ಹಾಗೂ ಆಕ್ಷೇಪಣೆಗಳ ವಿಲೇವಾರಿಯು ಫೆ.4ರಿಂದ 18ರವರೆಗೆ ನಡೆಯಲಿದ್ದು, ಮಾರ್ಚ್ 16ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.
ವೆಬ್‌ಸೈಟ್‌ನಲ್ಲಿ ಮತದಾರರ ಪಟ್ಟಿ: ವಾರ್ಡ್‌ವಾರು ಮತದಾರರ ಕರಡು ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣದಲ್ಲಿ (https://gba.karnataka.gov.in/home) ಪಿಡಿಎಫ್‌ನಲ್ಲಿ ಪ್ರಕಟಿಸಲಾಗಿದೆ. ಅದನ್ನು ಪರಿಶೀಲಿಸಿಕೊಳ್ಳಬೇಕು. ಗೊಂದಲವಿದ್ದರೆ ನಗರ ಪಾಲಿಕೆವಾರು ಸಹಾಯವಾಣಿ ಸ್ಥಾಪಿಸಲಾಗಿದ್ದು, ಕರೆ ಮಾಡಿ ಪರಿಹರಿಸಿಕೊಳ್ಳಬಹುದು ಎಂದರು.
ಗ್ರೇಟರ್ ಬೆಂಗಳೂರು ಆಡಳಿತ (ಮತದಾರರ ನೋಂದಣಿ) ನಿಯಮಗಳು, 2025ರಂತೆ ವಾರ್ಡ್‌ವಾರು ಮತದಾರರ ಪಟ್ಟಿ ಸಿದ್ಧತೆಗೆ, ಆಯೋಗದಿಂದ ನೇಮಕಗೊಂಡ ಮತದಾರರ ನೋಂದಣಾಧಿಕಾರಿ / ಸಹಾಯಕ ಮತದಾರರ ನೋಂದಣಾಧಿಕಾರಿ / ಬಿಎಲ್‌ಒ ಅವರ ಬಳಿ , ನಮೂನೆ 4 –ಮತದಾರರ ಹೆಸರು ಸೇರ್ಪಡೆಗೆ, ನಮೂನೆ 5– ಹೆಸರು ಸೇರ್ಪಡೆಗೆ ಆಕ್ಷೇಪಣೆ, ನಮೂನೆ 6– ಹೆಸರು ತಿದ್ದುಪಡಿಗೆ, ನಮೂನೆ 7– ಸ್ಥಳ ಬದಲಾವಣೆಗೆ, ನಮೂನೆ 8– ಹೆಸರು ತೆಗೆದುಹಾಕಲು ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.
ಬೆಂಗಳೂರು ಮಹಾನಗರ ಪಾಲಿಕೆಯ 100 ವಾರ್ಡ್‌ಗಳಿಗೆ 2001ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಮತ ಪತ್ರ ಬಳಸಲಾಯಿತು. 2004ರ ನಂತರ ರಾಜ್ಯದಲ್ಲಿ ಲೋಕಸಭೆ ವಿಧಾನಸಭೆ ಚುನಾವಣೆಗಳಿಗೆ ವಿದ್ಯುನ್ಮಾನ ಮತ ಯಂತ್ರಗಳನ್ನು (ಇವಿಎಂ) ಬಳಸಲಾಗಿತ್ತು. 2001ರ ನಂತರ ಬೆಂಗಳೂರು ಮಹಾನಗರ ಪಾಲಿಕೆಗೆ ನಿಗದಿತ ಅವಧಿಗೆ ಚುನಾವಣೆ ನಡೆಯಲಿಲ್ಲ. 2010ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್‌ಗಳಿಗೆ ಚುನಾವಣೆ ನಡೆದಾಗ ಇವಿಎಂ ಬಳಸಲಾಗಿತ್ತು. 2015ರಲ್ಲಿಯೂ ಇವಿಎಂ ಉಪಯೋಗಿಸಲಾಗಿತ್ತು. 2025ರಲ್ಲಿ ಜಿಬಿಎ ಐದು ನಗರ ಪಾಲಿಕೆಗಳು ರಚನೆಯಾಗಿದ್ದು ಈ ನಗರ ಪಾಲಿಕೆಗಳ ಚುನಾವಣೆಗೆ ಮತ ಪತ್ರವನ್ನು ಬಳಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. 25 ವರ್ಷಗಳ ನಂತರ ಬೆಂಗಳೂರಿನಲ್ಲಿ ನಡೆಯುವ ಚುನಾವಣೆಗೆ ಮತ ಪತ್ರ ಬಳಕೆಯಾಗಲಿದೆ.
‘ಜಿಬಿಎ ವ್ಯಾಪ್ತಿಯ ನಗರ ಪಾಲಿಕೆ ಚುನಾವಣೆಗಳಲ್ಲಿ ಮತ ಪತ್ರ ಬಳಸುವ ವಿಚಾರ ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟದ್ದು. ಆಯೋಗವು ಸ್ವತಂತ್ರ ಸಂಸ್ಥೆಯಾಗಿದ್ದು ಅದನ್ನು ತೀರ್ಮಾನಿಸುವ ಅಧಿಕಾರ ಅವರಿಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ‘ಬಿಜೆಪಿ ಅಧಿಕಾರದಲ್ಲಿದ್ದಾಗಲೇ 2020ರಲ್ಲಿ ತಂದ ಕಾನೂನಿನಲ್ಲಿ ಮತ ಪತ್ರ ಬಳಸಲು ಅವಕಾಶ ನೀಡಲಾಗಿದೆ. ನಾವು ಅದನ್ನು ಮುಂದುವರಿಸುತ್ತಿದ್ದೇವೆ. ಮತ ಪತ್ರ ಬಳಸುವುದರಲ್ಲಿ ತಪ್ಪೇನೂ ಇಲ್ಲ. ಯಾವ ರೂಪದಲ್ಲಿ ಚುನಾವಣೆ ನಡೆಸಲಾಗುವುದು ಎಂಬುದಕ್ಕಿಂತ ಮತದಾನ ನಡೆಯುವುದು ಬಹಳ ಮುಖ್ಯ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.