ADVERTISEMENT

ಇಂದಿನಿಂದಲೇ ಪಾಲಿಕೆಗಳಿಗೆ ತೆರಿಗೆ ಹಣ ಸಂದಾಯ: ಡಿ.ಕೆ. ಶಿವಕುಮಾರ್‌

ಪೂರ್ವ, ಪಶ್ಚಿಮ, ಉತ್ತರ ದಕ್ಷಿಣ ನಗರ ಪಾಲಿಕೆಗಳಿಗೆ ಹೊಸ ಪ್ರದೇಶಗಳು: ಡಿಸಿಎಂ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 0:05 IST
Last Updated 3 ಸೆಪ್ಟೆಂಬರ್ 2025, 0:05 IST
<div class="paragraphs"><p>ಡಿ.ಕೆ ಶಿವಕುಮಾರ್‌</p></div>

ಡಿ.ಕೆ ಶಿವಕುಮಾರ್‌

   

ಫೇಸ್‌ಬುಕ್‌ ಚಿತ್ರ

ಬೆಂಗಳೂರು: ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತೆರಿಗೆ ಹಣ ಆಯಾ ಪಾಲಿಕೆಗಳಿಗೆ ಬುಧವಾರದಿಂದಲೇ ಸಂದಾಯವಾಗಲಿದೆ. ಜಿಬಿಎ ಅಥವಾ ರಾಜ್ಯ ಸರ್ಕಾರಕ್ಕೆ ಬರುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ADVERTISEMENT

‘ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗುವುದಿಲ್ಲ. ಪಾಲಿಕೆಗಳಿಗೆ ಸ್ವಾಯತ್ತತೆ ನೀಡಲಾಗಿದೆ. ಮುಂದೆ ಜಿಬಿಎ ಮೂಲಕ ದೊಡ್ಡ ಯೋಜನೆಗಳ ಜಾರಿ, ಉತ್ತಮ ಆಡಳಿತ, ಸೇವೆಗೆ ಮೀಸಲಾಗಿರಲಿದೆ. ಸರ್ಕಾರದಿಂದ ಬಂದ ಹಣ ಜಿಬಿಎ ಹಾಗೂ ಪಾಲಿಕೆಗಳಿಗೆ ಹೋಗಲಿದೆ. ಇನ್ನು ಮುಂದಿನ ದಿನಗಳಲ್ಲಿ ಕಾನೂನು ಚೌಕಟ್ಟಿನಲ್ಲಿ ಚುನಾವಣೆ ನಡೆಯಲಿದೆ’ ಎಂದು ಸುದ್ದಿಗಾರರಿಗೆ ಮಂಗಳವಾರ ಮಾಹಿತಿ ನೀಡಿದರು.

‘ನಗರದ ಜನಸಂಖ್ಯೆ 1.44 ಕೋಟಿ ಎಂದು ಅಂದಾಜಿಸಲಾಗಿದೆ. 2011ರ ಜನಗಣತಿ ಪ್ರಕಾರ, ವಾರ್ಡ್‌ನಲ್ಲಿ 20 ಸಾವಿರ ಜನಸಂಖ್ಯೆ ಇತ್ತು. ಈಗ 35-40 ಸಾವಿರ ಸರಾಸರಿಯಲ್ಲಿ ವಾರ್ಡ್ ರಚನೆ ಮಾಡಲಾಗುವುದು’ ಎಂದು ವಿವರಿಸಿದರು.

‘ಮುಂದಿನ ದಿನಗಳಲ್ಲಿ ಪೂರ್ವ, ಪಶ್ಚಿಮ, ಉತ್ತರ ದಕ್ಷಿಣ ಪಾಲಿಕೆಗಳಿಗೆ ಹೊಸ ಪ್ರದೇಶಗಳು ಸೇರ್ಪಡೆಯಾಗಲು ಅವಕಾಶ ಕಲ್ಪಿಸಿದ್ದೇವೆ. ಕಾನೂನಿಗೆ ತೊಡಕಾಗಬಾರದು ಎಂಬ ಉದ್ದೇಶದಿಂದ ಆ ಬಗ್ಗೆ ಚರ್ಚೆ ಮಾಡುವುದಿಲ್ಲ. ಆಯಾ ಪಾಲಿಕೆಗಳು ಸರ್ಕಾರವನ್ನು ವಿಶ್ವಾಸಕ್ಕೆ ಪಡೆದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಗಳನ್ನು ಮಾಡಿಕೊಳ್ಳಲಿವೆ. ಈಗ ಹಾಲಿ ಇದ್ದ ಪಾಲಿಕೆ ವ್ಯಾಪ್ತಿಗೆ ಜಿಬಿಎ ರಚಿಸಿ, ಐದು ಪಾಲಿಕೆ ಮಾಡಿದ್ದೇವೆ. ಆನೇಕಲ್ ಕ್ಷೇತ್ರಕ್ಕೆ ಸೇರಿದ್ದ ಒಂದು ವಾರ್ಡ್ ಬಿಟ್ಟುಹೋಗಿತ್ತು. ಈಗ ಅದನ್ನು ಸರಿಪಡಿಸಿದ್ದೇವೆ’ ಎಂದು ಹೇಳಿದರು.

ಐತಿಹಾಸಿಕ ದಿನ: ‘ಬೆಂಗಳೂರಿನ ಪಾಲಿಗೆ ಇದೊಂದು ಐತಿಹಾಸಿಕ ದಿನ. ಅಧಿಕಾರ ವಿಕೇಂದ್ರೀಕರಣಗೊಳಿಸುವ ರಾಜೀವ್ ಗಾಂಧಿ ಅವರ ಆಶಯದಂತೆ ಸಂವಿಧಾನದ 74ನೇ ತಿದ್ದುಪಡಿಯನ್ನು ಪಾಲಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. 1993ರ ಜೂನ್ 1ರಂದು ಕರ್ನಾಟಕದಲ್ಲಿ 74ನೇ ತಿದ್ದುಪಡಿ ಜಾರಿಗೆ ಬಂದಿತು’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

‘ಪೂರ್ವ ನಗರ ಪಾಲಿಕೆಯ ಆದಾಯ ಪೂರ್ವ ಪಾಲಿಕೆಗೇ ಸೀಮಿತವಾಗಲಿದೆ. ಪಶ್ಚಿಮ ನಗರ ಪಾಲಿಕೆ ಆದಾಯ ಕಡಿಮೆ ಇದ್ದಾಗ ಸರ್ಕಾರ ಅವರಿಗೆ ನೆರವು ನೀಡಬೇಕು. ನಾವು ಪೂರ್ವದ ಹಣವನ್ನು ಪಶ್ಚಿಮದ ಪಾಲಿಕೆಗೆ ನೀಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾಗಿರಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಉತ್ತಮ ಆಡಳಿತ, ಸೇವೆ ನೀಡಬೇಕು, ಸಂವಿಧಾನ ರಕ್ಷಣೆ ಮಾಡಬೇಕು. ಈ ಹಿಂದೆ ನಗರದ ಸಣ್ಣಪುಟ್ಟ ವಿಚಾರಕ್ಕೂ ಬೆಂಗಳೂರು ಆಯುಕ್ತರಿಗೆ ಕರೆ ಮಾಡಬೇಕಿತ್ತು. ಈಗ ಪರಿಸ್ಥಿತಿ ಹಾಗಿಲ್ಲ. ಜಿಬಿಎ ಅಧಿಕಾರಿಗಳು ನಗರದ ದೊಡ್ಡ ಯೋಜನೆಗಳ ಜವಾಬ್ದಾರಿ ಮಾತ್ರ ನಿಭಾಯಿಸುತ್ತಾರೆ. ಸುರಂಗ ರಸ್ತೆ ಸೇರಿದಂತೆ ಬೇರೆ ಬೇರೆ ಪಾಲಿಕೆಗಳ ಮೂಲಕ ಹಾದುಹೋಗುವ ದೊಡ್ಡ ದೊಡ್ಡ ಯೋಜನೆ ನೋಡಿಕೊಳ್ಳುತ್ತಾರೆ. ಉಳಿದಂತೆ ಇತರೆ ವಿಚಾರಗಳಿಗೆ ಆಯಾ ಪಾಲಿಕೆಗೆ ನಿಯೋಜನೆಯಾಗಿರುವ ಆಯುಕ್ತರು ಹೊಣೆಗಾರಿಕೆ ಹೊಂದಿರುತ್ತಾರೆ. ಅಧಿಕಾರ ವಿಕೇಂದ್ರೀಕರಣ ಮಾಡಲಾಗಿದೆ’ ಎಂದರು.

ಗ್ರೇಟರ್‌ ಬೆಂಗಳೂರು ರಚನೆ ಹಾದಿ...

‘2007ರ ಜನವರಿ 16ರಂದು 198 ವಾರ್ಡ್‌ಗಳೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಚನೆಯಾಗಿತ್ತು. 2024ರ ಸೆಪ್ಟೆಂಬರ್‌ 22ರಂದು ಬಿ.ಎಸ್ ಪಾಟೀಲ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ಬೆಂಗಳೂರಿನಲ್ಲಿ ಉತ್ತಮ ಆಡಳಿತ ನೀಡುವ ಬಗ್ಗೆ ಅಧ್ಯಯನ ನಡೆಸಲಾಯಿತು. ಈ ಸಮಿತಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಅಧ್ಯಯನ ಮಾಡಿ ಒಂಬತ್ತು ವರದಿಗಳನ್ನು ಸಲ್ಲಿಸಿತ್ತು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

‘2015ರಲ್ಲಿ ಬೆಂಗಳೂರಿನಲ್ಲಿ ಮೂರು ಪಾಲಿಕೆಗಳನ್ನು ಮಾಡಬೇಕು ಎಂಬ ತೀರ್ಮಾನಕ್ಕೆ ಬರಲಾಯಿತು. ಈ ಪ್ರಸ್ತಾಪವನ್ನು ರಾಜ್ಯಪಾಲರಿಗೆ ಕಳುಹಿಸಿಲಾಗಿತ್ತಾದರೂ ನಂತರ ರಾಜ್ಯ ಸರ್ಕಾರ 2019ರ ಜುಲೈ 26ರಂದು ಅದನ್ನು ಹಿಂಪಡೆಯಿತು’ ಎಂದರು.

‘ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ತೀರ್ಮಾನಿಸಿ, 2023ರ ಜುಲೈ 18ರಂದು ಬಿ.ಎಸ್ ಪಾಟೀಲ್ ಅವರ ಸಮಿತಿ ರಚಿಸಿದೆವು. ಈ ಸಮಿತಿ 2024ರ ಜುಲೈ 12ರಂದು ವರದಿ ಸಲ್ಲಿಸಿತ್ತು. ಗ್ರೇಟರ್ ಬೆಂಗಳೂರು ಆಡಳಿತ  ಮಸೂದೆ ಸಿದ್ಧಪಡಿಸಿ, ಜುಲೈ 25ರಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು. ವಿರೋಧ ಪಕ್ಷಗಳ ಸದಸ್ಯರ ಸಲಹೆ ಮೇರೆಗೆ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ 15 ಸದಸ್ಯರ ಜಂಟಿ ಸದನ ಸಮಿತಿ ರಚಿಸಲಾಯಿತು. ಈ ಸಮಿತಿ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ನೀಡಿದ ವರದಿಯನ್ವಯ, 2025ರ ಮಾರ್ಚ್‌ 10ರಂದು ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ  ಮಂಡಿಸಲಾಯಿತು. ಮಾ.12ರಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ಮಾಡಿ ಅನುಮೋದನೆ ಪಡೆದು ರಾಜ್ಯಪಾಲರಿಗೆ ಕಳುಹಿಸಲಾಯಿತು. 2025ರ ಏಪ್ರಿಲ್ 23ರಂದು ರಾಜ್ಯಪಾಲರು ಅಂಕಿತ ಹಾಕಿದರು. ಮೇ 15ರಿಂದ ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಜಾರಿಗೆ ಬಂದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿತು. ಜುಲೈ 19ರಂದು ಐದು ನಗರ ಪಾಲಿಕೆಗಳ ಕರಡು ಅಧಿಸೂಚನೆ ಹೊರಡಿಸಿ, 30 ದಿನಗಳ ಕಾಲಾವಕಾಶ ನೀಡಲಾಯಿತು.  55 ಆಕ್ಷೇಪಣೆಗಳು ಬಂದಿದ್ದವು. ಇದೆಲ್ಲವನ್ನು ಬಗೆಹರಿಸಿ ಐದು ಪಾಲಿಕೆಗಳ ಗಡಿಯ ನಕ್ಷೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆಯಲಾಯಿತು. ಅಂತಿಮ ಅಧಿಸೂಚನೆ ಹೊರಡಿಸಲಾಯಿತು ಎಂದು ಮಾಹಿತಿ ನೀಡಿದರು.

ಕಟ್ಟಡಗಳಿಗೆ ನ.1ರಂದು ಭೂಮಿ ಪೂಜೆ

ನಗರ ಪಾಲಿಕೆಗಳ ಕಚೇರಿಗಾಗಿ, ಹೊಸ ಕಟ್ಟಡಗಳ ನಿರ್ಮಾಣಕ್ಕೆ ನವೆಂಬರ್ 1ರಂದು ಭೂಮಿ ಪೂಜೆ ನಡೆಯಲಿದೆ. ಇದಕ್ಕಾಗಿ ಜಾಗ ಗುರುತಿಸಿದ್ದು, ಐದೂ ನಗರ ಪಾಲಿಕೆಗಳ ಕಟ್ಟಡಗಳು ಒಂದೇ ರೀತಿ ನಿರ್ಮಾಣವಾಗಲಿವೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.

‘ಎಲ್ಲಾ ವಲಯಗಳಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಪ್ರತಿ ನಗರ ಪಾಲಿಕೆಯಲ್ಲಿ ಆಡಳಿತಾಧಿಕಾರಿಯಾಗಿ ಆಯುಕ್ತರನ್ನು ನೇಮಕ ಮಾಡಲಾಗಿದೆ. ಆಯುಕ್ತರಿಗೆ ನೆರವಾಗಲು, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಕೆಎಎಸ್ ಅಧಿಕಾರಿಗಳು ಹಾಗೂ ಮುಖ್ಯ ಎಂಜಿನಿಯರ್‌ ಕಡ್ಡಾಯವಾಗಿ ಇರುತ್ತಾರೆ. ಈ ಹಿಂದೆ ಇದ್ದ 27 ವಿಭಾಗಗಳನ್ನು 50 ವಿಭಾಗಗಳಾಗಿ ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150ಕ್ಕೆ ಏರಿಸಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಗರಿಷ್ಠ 150 ವಾರ್ಡ್‌ಗಳವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ನಗರ ಪಾಲಿಕೆಯಲ್ಲಿ ಸರಾಸರಿಯಲ್ಲಿ 100 ವಾರ್ಡ್‌ಗಳಂತೆ ಬೆಂಗಳೂರಿನಲ್ಲಿ ಸುಮಾರು 500 ಹೊಸ ನಾಯಕರನ್ನು ಆಯ್ಕೆ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮಹಿಳೆಯರು ಹಾಗೂ ಪುರುಷರು 50:50 ಇರುತ್ತಾರೆ’ ಎಂದು ವಿವರ ನೀಡಿದರು.

ಅತ್ಯುತ್ತಮ ವಿನ್ಯಾಸಕ್ಕೆ ₹5 ಲಕ್ಷ ಬಹುಮಾನ

‘ನಗರ ಪಾಲಿಕೆಗಳ ವಾಸ್ತುಶಿಲ್ಪಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರೂ ಸಲಹೆ ನೀಡಬಹುದು. ಅತ್ಯುತ್ತಮ ವಿನ್ಯಾಸಕ್ಕೆ ₹5 ಲಕ್ಷ ಬಹುಮಾನ ನೀಡಲಾಗುತ್ತದೆ. ಜಿಬಿಎ ಲೊಗೊ ರಚಿಸಲೂ ಸಲಹೆ ನೀಡಬಹುದಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.