‘ವಿಶ್ವ ಪವನ ದಿನ–2025’ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಶಸ್ತಿ ಸ್ವೀಕರಿಸಿದರು. ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಮತ್ತಿತರರು ಹಾಜರಿದ್ದರು
ಬೆಂಗಳೂರು: ‘2030ರ ವೇಳೆಗೆ ದೇಶದ ಒಟ್ಟಾರೆ ವಿದ್ಯುತ್ ಉತ್ಪಾದನೆಯಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಶೇಕಡ 50ಕ್ಕೆ ಏರಿಸಲಾಗುತ್ತದೆ. 2070ರ ವೇಳೆಗೆ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಕ್ಕೆ ತರುವ ಗುರಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಪವನ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ’ ಎಂದು ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
‘ವಿಶ್ವ ಪವನ ದಿನ–2025’ ಅಂಗವಾಗಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಪವನ್-ಉರ್ಜಾ: ಪವರಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ’ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಪವನ ವಿದ್ಯುತ್‌ನಲ್ಲಿ ಭಾರತ ಜಾಗತಿಕವಾಗಿ 4ನೇ ಸ್ಥಾನದಲ್ಲಿದೆ. 2030ರ ವೇಳೆಗೆ ನವೀಕರಿಸಬಹುದಾದ ಇಂಧನ ಉತ್ಪಾದನೆಯನ್ನು 500 ಗಿಗಾವಾಟ್‌ಗೆ ಹೆಚ್ಚಿಸಲು ಭಾರತ ಬದ್ಧವಾಗಿದೆ. ಪವನ ವಿದ್ಯುತ್ ಕ್ಷೇತ್ರದಿಂದಲೇ 100 ಗಿಗಾವಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ’ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ‘2025ರ ಮೇ ವೇಳೆಗೆ ರಾಜ್ಯದಲ್ಲಿ ಪವನ ವಿದ್ಯುತ್ ಉತ್ಪಾದನೆ ಸಾಮರ್ಥ್ಯ 7,351 ಮೆಗಾವಾಟ್ ಇತ್ತು. ಕಳೆದ ಆರ್ಥಿಕ ವರ್ಷದಲ್ಲಿ 1,331 ಮೆಗಾವಾಟ್ ಸೇರ್ಪಡೆ ಮಾಡುವ ಮೂಲಕ ದೇಶದಲ್ಲೇ ಅಗ್ರ ಸ್ಥಾನದಲ್ಲಿದ್ದೇವೆ’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್, ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ, ರಾಜ್ಯ ಸರ್ಕಾರದ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ (ಕ್ರೆಡಲ್) ಅಧ್ಯಕ್ಷ ಟಿ.ಡಿ.ರಾಜೇಗೌಡ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಮತ್ತಿತ್ತರರು ಉಪಸ್ಥಿತರಿದ್ದರು.
ನವೀಕರಿಸಬಹುದಾದ ಇಂಧನ ಕ್ಲಸ್ಟರ್ ಕಾರ್ಯಕ್ರಮದಡಿ 5 ಗಿಗಾವಾಟ್‌ಗಿಂತ ಹೆಚ್ಚು ಪವನ ವಿದ್ಯುತ್ ಸೇರ್ಪಡೆಗೊಳಿಸಲಿದ್ದೇವೆ. ಇದಕ್ಕಾಗಿ 20ಕ್ಕೂ ಹೆಚ್ಚು ಉಪ ಕೇಂದ್ರಗಳು 400 ಕೆ.ವಿ. ಕಾರಿಡಾರ್‌ಗಳು ಹಾಗೂ ನವೀಕರಿಸಬಹುದಾದ ಇಂಧನದ ಮೀಸಲು ವಲಯದಂತಹ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ– ಕೆ.ಜೆ.ಜಾರ್ಜ್ ಇಂಧನ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.