ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಬೇಕರಿ, ಕಾಂಡಿಮೆಂಟ್ಸ್ ಸೇರಿದಂತೆ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನೀಡಿರುವ ನೋಟಿಸ್‌ಗಳನ್ನು ಕೂಡಲೇ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 25ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಿಳಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ರಾಜ್ಯ ಘಟಕದ ಅಧಕ್ಷ ರವಿ ಶೆಟ್ಟಿ ಬೈಂದೂರು, ‘ತೆರಿಗೆ ವ್ಯಾಪ್ತಿಯಿಂದ ಹೊರಗೆ ಇರುವ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ಅಧಿಕಾರಿಗಳು ನೋಟಿಸ್ ನೀಡುತ್ತಿರುವುದು ಅವೈಜ್ಞಾನಿಕವಾಗಿದೆ. ವ್ಯಾಪಾರ–ವಹಿವಾಟಿನ ಮೌಲ್ಯಮಾಪನ ಮಾಡದೇ 2021ರಿಂದ ಇದುವರೆಗೆ ನಡೆದಿರುವ ಬ್ಯಾಂಕಿನ ವಹಿವಾಟು ಆಧರಿಸಿ ನೋಟಿಸ್ ನೀಡಿರುವುದು ಖಂಡನೀಯ. ಜೀವನೋಪಾಯಕ್ಕಾಗಿ ಹಾಲು, ಹೂವು, ಹಣ್ಣು–ತರಕಾರಿ ಮಾರಾಟ ಮಾಡುವ ಬೀದಿಬದಿಯ ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸುವಂತೆ ಒತ್ತಾಯಿಸುತ್ತಿರುವುದು ಸರಿಯಲ್ಲ’ ಎಂದು ಹೇಳಿದರು.
‘ವ್ಯಾಪಾರಿಗಳಿಗೆ ನೀಡಿರುವ ನೋಟಿಸ್‌ಗಳನ್ನು ಇದೇ 22ರ ಒಳಗೆ ಹಿಂಪಡೆಯಬೇಕು. ಇಲ್ಲದಿದ್ದರೆ ಜುಲೈ 23ರಿಂದ 24ರವರೆಗೆ ಕಪ್ಪು ಪಟ್ಟಿ ಧರಿಸಿ ವ್ಯಾಪಾರ ವಹಿವಾಟು ಮಾಡಲಾಗುತ್ತದೆ. ಜುಲೈ 25ರಂದು ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.