ಬೆಂಗಳೂರು: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಅತಿಥಿ ಶಿಕ್ಷಕರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಅತಿಥಿ ಶಿಕ್ಷಕರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು.
ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭೇಟಿ ಮಾಡಿ ಆಹವಾಲು ಆಲಿಸಿದರು.
ನಂತರ ಮಾತನಾಡಿದ ಅವರು, ‘ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ’ ಎಂದು ಹೇಳಿದರು.
‘ವಿಶ್ವವಿದ್ಯಾಲಯಗಳಿಗೆ ₹400 ಕೋಟಿ ಅನುದಾನ ಬಿಡುಗಡೆ ಮಾಡಬೇಕಿದೆ. ಆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ ಎನ್ನುವ ಕಾರಣಕ್ಕಾಗಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿ ಹೊಸ ವಿಶ್ವವಿದ್ಯಾಲಯಗಳನ್ನೇ ಮುಚ್ಚಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಂದಾಗಿದೆ’ ಎಂದು ಹೇಳಿದರು.
‘ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕಿತ್ತು’ ಎಂದು ಹೇಳಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ‘ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡುವ ನಿಮ್ಮ ವೇತನ ಹೆಚ್ಚಳದ ಬೇಡಿಕೆ ಸರಿ ಇದೆ. ನಿಮ್ಮ ಬೇಡಿಕೆಗಳಿಗೆ ಸಹಮತ ಇದೆ’ ಎಂದು ತಿಳಿಸಿದರು.
‘ಬೇಡಿಕೆ ಈಡೇರಿಸುವಂತೆ ಕೋರಿ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ. ಸದನದಲ್ಲೂ ಪ್ರಸ್ತಾಪಿಸಿ ಹೋರಾಟ ಮಾಡುತ್ತೇವೆ’ ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.