ಬೆಂಗಳೂರು: ‘ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣದ ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ. ಹಣ ದುರ್ಬಳಕೆ ಮಾಡಿದವರ ಮೇಲೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆ ಆರೋಪಿಸಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಹರೀಶ್ ವಿ., ‘ಬ್ಯಾಂಕಿನ ಠೇವಣಿದಾರ ಹಿತಾಸಕ್ತಿ ಕಾಪಾಡುವಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ಪಾತ್ರ ನಿರ್ವಹಿಸಿದ್ದರೆ, ಷೇರುದಾರರು ಹಾಗೂ ಠೇವಣಿದಾರರು ವಂಚನೆಗೆ ಒಳಗಾಗುತ್ತಿರಲಿಲ್ಲ. ಆದ್ದರಿಂದ ಆರ್‌ಬಿಐ ನಮ್ಮೆಲ್ಲರ ಮೊತ್ತವನ್ನು ಪಾವತಿಸಬೇಕು. ಹಗರಣದ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನು ಪಡೆದು, ಅಕ್ರಮವಾಗಿ ಗಳಿಸಿದ ಹಣದಿಂದ ಜೀವನ ಸಾಗಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಬ್ಯಾಂಕಿನ ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಸಾಲಗಾರರ ಪಟ್ಟಿ ಸಿದ್ಧಪಡಿಸುವಲ್ಲಿ ಬ್ಯಾಂಕಿನ ಆಡಳಿತಾಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಸಾಲ ವಸೂಲಾತಿಗೆ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.