ADVERTISEMENT

ಗುರು ರಾಘವೇಂದ್ರ ಬ್ಯಾಂಕ್‌: ಸಿಬಿಐ ತನಿಖೆಗೆ ಒತ್ತಾಯಿಸಿ ಠೇವಣಿದಾರರ ಪ್ರತಿಭಟನೆ

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 19:31 IST
Last Updated 29 ನವೆಂಬರ್ 2021, 19:31 IST
‘ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಬ್ಯಾಂಕ್‌ನ ಠೇವಣಿದಾರರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ
‘ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಬ್ಯಾಂಕ್‌ನ ಠೇವಣಿದಾರರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಲಿಮಿಟೆಡ್‌ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಬ್ಯಾಂಕ್‌ನ ಠೇವಣಿದಾರರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ಠೇವಣಿದಾರರು, ‘ವಂಚಕರನ್ನು ಗಲ್ಲಿಗೇರಿಸಿ’, ‘ನಮ್ಮ ಹಣ ನಮಗೆ ಬೇಕು’ ಹಾಗೂ ‘ಹಿರಿಯ ನಾಗರಿಕರಿಗೆ ನ್ಯಾಯ ಕೊಡಿಸಿ’ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ‘ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣೆ ವೇದಿಕೆ’ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ವೇದಿಕೆಯ ಡಾ. ಶಂಕರ್ ಗುಹಾ ದ್ವಾರಕಾನಾಥ್ ಬೆಳ್ಳೂರು, ‘ಅವ್ಯವಹಾರದ ವಿರುದ್ಧ ಒಂದು ವರ್ಷದಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ನೊಂದ ಠೇವಣಿದಾರರಿಗೆ ರಾಜ್ಯ ಸರ್ಕಾರದಿಂದ ಯಾವುದೇ ನ್ಯಾಯ ಸಿಗುತ್ತಿಲ್ಲ. ವಂಚನೆ ಮಾಡಿರುವ ಪ್ರಭಾವಿಗಳನ್ನು ರಕ್ಷಿಸುವ ಕೆಲಸವಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು’ ಎಂದರು.

ADVERTISEMENT

‘ಸ್ಥಳೀಯ ಶಾಸಕ ಎಲ್‌.ಎ. ರವಿ ಸುಬ್ರಹ್ಮಣ್ಯ, ಸಂಸದ ತೇಜಸ್ವಿ ಸೂರ್ಯ ಅವರು ಅವ್ಯವಹಾರದ ಬಗ್ಗೆ ಮೌನ ವಹಿಸಿದ್ದಾರೆ. ಇದು ಅವರ ಮೇಲೆಯೇ ಅನುಮಾನ ಮೂಡುವಂತೆ ಮಾಡಿದೆ. ಇವರಿಬ್ಬರು ಜನರ ಪರವೇ ಅಥವಾ ವಂಚಕರ ಪರವೇ ಎಂಬ ಪ್ರಶ್ನೆ ಮೂಡಿದೆ’ ಎಂದೂ ಹೇಳಿದರು.

ಹಿರಿಯ ನಾಗರಿಕರೇ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ‘ಠೇವಣಿ ಇಟ್ಟಿರುವ ಹಣ ವಾಪಸು ಕೊಡಿಸಿ’ ಎಂದು ಹಲವರು ಕಣ್ಣೀರಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.