ಬೆಂಗಳೂರು: ಹೆಬ್ಬಾಳ ಕ್ಷೇತ್ರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಇನ್ನೊಂದು ವಾರದಲ್ಲಿ ಆರಂಭಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಕ್ಷೇತ್ರದ ಕುಂದುಕೊರತೆಗಳ ಪರಿಹಾರಕ್ಕೆ ಶನಿವಾರ ಆಯೋಜಿಸಿದ್ದ ಜನಸ್ಪಂದನ ಸಭೆಯಲ್ಲಿ ಅವರು ಮಾತನಾಡಿದರು.
ಒಳಚರಂಡಿ ಕಾಮಗಾರಿಗಾಗಿ ರಸ್ತೆಯನ್ನು ಅಗೆದು ಬಿಡಲಾಗಿದೆ, ಬೀದಿ ದೀಪಗಳ ಸಮಸ್ಯೆ, ಇ– ಖಾತಾ ವಿತರಣೆಯಲ್ಲಿ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳನ್ನು ನಾಗರಿಕರು ಸಚಿವರ ಮುಂದಿಟ್ಟರು.
ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ. ಇನ್ನು ಒಂದೆರಡು ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ಮಳೆ ಬಿಟ್ಟ ತಕ್ಷಣ ಗುಂಡಿ ಮುಚ್ಚುವ ಕಾಮಗಾರಿಯನ್ನು ಮೊದಲ ಆದ್ಯತೆಯಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕಸ ವಿಲೇವಾರಿಯಲ್ಲಿ ಆಗುತ್ತಿರುವ ಲೋಪಗಳ ಬಗ್ಗೆ ಜನರು ದೂರು ತೋಡಿಕೊಂಡ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಕೂಡಲೇ ಈ ಲೋಪ ಎಸಗಿದ ಕಸ ವಿಲೇವಾರಿ ಗುತ್ತಿಗೆದಾರನಿಗೆ ನೊಟೀಸ್ ನೀಡಿ ದಂಡ ವಿಧಿಸಬೇಕು’ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು.
ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲು ಅಲ್ಲಲ್ಲಿ ರಸ್ತೆಯನ್ನು ಅಗೆಯಲಾಗಿತ್ತು. ಆದರೆ, ಕಾಮಗಾರಿ ಮುಗಿದು ಹಲವು ತಿಂಗಳುಗಳು ಕಳೆದಿದ್ದರೂ ರಸ್ತೆ ದುರಸ್ತಿ ಮಾಡದ ಜಲಮಂಡಳಿ ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇಂತಹ ಸ್ಥಳಗಳಲ್ಲಿ ರಸ್ತೆ ದುರಸ್ತಿ ಮಾಡಿ ಡಾಂಬರೀಕರಣ ಮಾಡುವ ಕಾಮಗಾರಿಯನ್ನು ಸೋಮವಾರದೊಳಗೆ ಪೂರ್ಣಗೊಳಿಸಬೇಕು. ಇದಕ್ಕೆ ವಿಫಲರಾದ ಅಧಿಕಾರಿಗಳನ್ನು ನಿರ್ದಾಕ್ಷಿಣ್ಯವಾಗಿ ಅಮಾನತು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪಾದಚಾರಿ ಮಾರ್ಗಗಳಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಇಟ್ಟುಕೊಂಡು ಪಾದಚಾರಿಗಳಿಗೆ ಅಡಚಣೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರ ಅಂತಹ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೀದಿ ದೀಪಗಳ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ಭದ್ರತಾ ವ್ಯವಸ್ಥೆ ಸೇರಿದಂತೆ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಿದ ಸಚಿವರು, ಕಾಲಮಿತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಗಡುವು ವಿಧಿಸಿದರು.
ಇಬ್ಬರು ಗುತ್ತಿಗೆದಾರರಿಗೆ ₹ 4 ಲಕ್ಷ ದಂಡ
ಬೆಂಗಳೂರು: ನಗರದ ಸರ್ಜಾಪುರ ರಸ್ತೆ ಮತ್ತು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಸ್ಥಳದಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಸೂಕ್ತ ಸುರಕ್ಷಿತ ಕ್ರಮಗಳನ್ನು ಬ್ಯಾರಿಕೇಡ್ ಎಚ್ಚರಿಕೆ ಫಲಕಗಳನ್ನು ಅಳವಡಿಸದ ಇಬ್ಬರು ಗುತ್ತಿಗೆದಾರರಿಗೆ ತಲಾ ₹ 2 ಲಕ್ಷ ರೂ. ದಂಡ ವಿಧಿಸಲಾಗಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಶುಕ್ರವಾರ ವಿವಿಧೆಡೆ ಕಾಮಗಾರಿಗಳ ಪರಿವೀಕ್ಷಣೆ ಮಾಡಿದ್ದರು. ವೈಟ್‌ಟಾಪಿಂಗ್ ಕಾಮಗಾರಿ ನಡೆಸುವಾಗ ಸುರಕ್ಷತಾ ಕ್ರಮ ಕೈಗೊಳ್ಳದಿರುವುದು ಕಂಡು ಬಂದಿದ್ದರಿಂದ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಅದರಂತೆ ಮೆ. ಜೆಎಂಸಿ ಕನ್‌ಸ್ಟ್ರಕ್ಷನ್ ಮತ್ತು ಮೆ. ಓಷನ್ ಕನ್‌ಸ್ಟ್ರಕ್ಷನ್ ಗುತ್ತಿಗೆ ಕಂಪನಿಗಳಿಗೆ ದಂಡ ವಿಧಿಸಲಾಗಿದೆ. ಎರಡು ದಿನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಮಗಾರಿಯ ವೇಗ ಹೆಚ್ಚಿಸಲು ಸೂಚಿಸಲಾಗಿದೆ ಎಂದು ಬಿ ಸ್ಮೈಲ್ ತಾಂತ್ರಿಕ ನಿರ್ದೇಶಕ ಬಿ.ಎಸ್. ಪ್ರಹ್ಲಾದ್ ತಿಳಿಸಿದ್ದಾರೆ.
ನೂರು ಗುಂಡಿ ಮುಚ್ಚಿದ ಬಿಎಂಆರ್‌ಸಿಎಲ್
ಬನ್ನೇರುಘಟ್ಟ ರಸ್ತೆಯಲ್ಲಿ ಹುಳಿಮಾವು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರು ಗುಂಡಿಗಳನ್ನು ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮುಚ್ಚಿದೆ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.