ADVERTISEMENT

ಮೇಲ್ಮನವಿ ವಿಚಾರಣೆ ಪೂರ್ಣ: ಕಾಯ್ದಿರಿಸಿದ ಆದೇಶ; ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 20:27 IST
Last Updated 4 ನವೆಂಬರ್ 2025, 20:27 IST
<div class="paragraphs"><p>ಕರ್ನಾಟಕ ಹೈಕೋರ್ಟ್</p></div>

ಕರ್ನಾಟಕ ಹೈಕೋರ್ಟ್

   

ಬೆಂಗಳೂರು: ‘ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವ ಮುನ್ನ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು’ ಎಂಬ ರಾಜ್ಯ ಸರ್ಕಾರದ ಆದೇಶದ ಅನುಷ್ಠಾನಕ್ಕೆ ತಡೆ ನೀಡಿರುವುದನ್ನು ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಆದೇಶ ಕಾಯ್ದಿರಿಸಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಸ್‌.ಜಿ. ಪಂಡಿತ್‌ ಹಾಗೂ ಕೆ.ಬಿ. ಗೀತಾ ಅವರಿದ್ದ ವಿಭಾಗೀಯ ನ್ಯಾಯಪೀಠ (ಧಾರವಾಡ) ವಿಚಾರಣೆ ನಡೆಸಿ ಈ ಕುರಿತ ಆದೇಶ ಕಾಯ್ದಿರಿಸಿದೆ.

ADVERTISEMENT

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳಿಗೆ ನಿರ್ಬಂಧ ಹೇರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 2025ರ ಅಕ್ಟೋಬರ್ 18ರಂದು ಈ ಸಂಬಂಧ ಆದೇಶ ಹೊರಡಿಸಿತ್ತು.

ರಾಜ್ಯ ಸಚಿವ ಸಂಪುಟದ ಈ ನಿರ್ಣಯವನ್ನು ಪ್ರಶ್ನಿಸಿ ಹುಬ್ಬಳ್ಳಿಯ, ‘ಪುನಃಶ್ಚೇತನ ಸೇವಾ ಸಂಸ್ಥೆ’ ಅಧ್ಯಕ್ಷ ವಿನಾಯಕ ಮತ್ತು ‘ವಿ ಕೇರ್ ಫೌಂಡೇಷನ್’ ಅಧ್ಯಕ್ಷ ಗಂಗಾಧರಯ್ಯ, ಧಾರವಾಡದ ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್‌ ಚವಾಣ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು‌.

‘ಸಾರ್ವಜನಿಕ ಸ್ಥಳಗಳಲ್ಲಿ ಹತ್ತಕ್ಕೂ ಅಧಿಕ ಮಂದಿ ಗುಂಪು ಸೇರುವುದನ್ನು‌ ನಿರ್ಬಂಧಿಸಿ ಸರ್ಕಾರ ಹೊರಡಿಸಿರುವ ಆದೇಶವು ಮೇಲ್ನೋಟಕ್ಕೆ ಸಂವಿಧಾನದ 19(1)(ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಹಾಗೂ 19(1)(ಬಿ) (ಶಸ್ತ್ರಾಸ್ತ್ರ ರಹಿತವಾಗಿ, ಶಾಂತಿಯುತವಾಗಿ ಒಟ್ಟುಗೂಡುವ) ವಿಧಿ ಅಡಿಯಲ್ಲಿ ಸಾರ್ವಜನಿಕರಿಗೆ ದೊರೆತಿರುವ ಹಕ್ಕುಗಳನ್ನು ಕಸಿದುಕೊಳ್ಳುವಂತಿವೆ. ಸಂವಿಧಾನ ಪ್ರದತ್ತವಾದ ಹಕ್ಕನ್ನು ಕಾನೂನು ಜಾರಿಗೊಳಿಸುವ ಮೂಲಕ ಕಸಿದುಕೊಳ್ಳಬಹುದೇ ಹೊರತು ಸರ್ಕಾರಿ ಆದೇಶ ಹೊರಡಿಸುವ ಮೂಲಕವಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಕಳೆದ ಅಕ್ಟೋಬರ್‌ 28ರಂದು ಮಧ್ಯಂತರ ಆದೇಶ ಹೊರಡಿಸಿತ್ತು.

‘ಒಂದೊಮ್ಮೆ, ಸರ್ಕಾರದ ಆದೇಶವನ್ನು ಹೀಗೇ ಬಿಟ್ಟರೆ, ಸಾರ್ವಜನಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶವನ್ನು ಕಾರ್ಯಗತಗೊಳಿಸಲು ಅನುಮತಿಸಲು ಸಾಧ್ಯವಿಲ್ಲ’ ಎಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.