ADVERTISEMENT

ರಾಘವೇಂದ್ರ ಬ್ಯಾಂಕ್ ಆಸ್ತಿ ಜಪ್ತಿಗೆ ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2020, 20:09 IST
Last Updated 23 ಡಿಸೆಂಬರ್ 2020, 20:09 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಹೂಡಿಕೆದಾರರ ಠೇವಣಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಗುರು ರಾಘವೇಂದ್ರ ಬ್ಯಾಂಕ್‌ಗೆ ಸೇರಿದ ಎಲ್ಲಾ ಅಸ್ತಿಗಳನ್ನು ಜಪ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

‌ಬ್ಯಾಂಕ್ ಹಗರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲು ಕೋರಿ ಕೆ.ಆರ್. ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಠೇವಣಿದಾರರ ಹಿತದೃಷ್ಟಿಯಿಂದ ಕೆಪಿಐಡಿ ಕಾಯ್ದೆಯಡಿ ಬ್ಯಾಂಕ್‍ನ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಆ ಕುರಿತ ವರದಿಯನ್ನು 2021ರ ಜ.8ರೊಳಗೆ ಸಲ್ಲಿಸಬೇಕು. ಆರ್‌ಬಿಐ ಸೂಚಿಸಿರುವ ಇಬ್ಬರು ನಿವೃತ್ತ ಬ್ಯಾಂಕ್ ಅಧಿಕಾರಿಯಾಗಿ ನೇಮಿಸಲಾಗಿದೆ. ಮತ್ತೊಬ್ಬರನ್ನು ಗುರು ರಾಘವೇಂದ್ರ ಕೋ–ಆಪರೇಟಿವ್ ಸೊಸೈಟಿಗೆ ಆಡಳಿತಾಧಿಕಾರಿಯಾಗಿ ನೇಮಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.

ADVERTISEMENT

‘ಪ್ರಕರಣ ಸಂಬಂಧ ಹೈಕೋರ್ಟ್ ನೀಡಿರುವ ಹಲವು ನಿರ್ದೇಶನಗಳನ್ನು ಪಾಲಿಸುವಲ್ಲಿ ಸರ್ಕಾರ ವಿಫಲವಾಗುತ್ತಿದೆ. ಹೀಗಾಗಿ, ಸರ್ಕಾರ ವಿಳಂಬ ಮಾಡದೆ ನ್ಯಾಯಾಲಯದ ನಿರ್ದೇಶನಗಳ ಪಾಲನೆಗೆ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ನ್ಯಾಯಾಂಗ ನಿಂದನೆ ಪ್ರಕರಣದ ಅಡಿ ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಎಚ್ಚರಿಸಿತು.

ಬ್ಯಾಂಕಿನ ಬಾಕಿ ಸಾಲ ವಸೂಲಿ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ಹೊರಡಿಸಿರುವ ಆದೇಶಗಳ ಅನುಪಾಲನಾ ವರದಿಯನ್ನು ಮುಂದಿನ ವಿಚಾರಣೆ ವೇಳೆ ತಪ್ಪದೆ ಸಲ್ಲಿಸುವಂತೆ ಆಡಳಿತಾಧಿಕಾರಿಗೆ ಸೂಚಿಸಿದ ನ್ಯಾಯಾಪೀಠ ವಿಚಾರಣೆಯನ್ನು ಜ.11ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.