ADVERTISEMENT

ಸಾರಿಗೆ ಇಲಾಖೆ ಧೋರಣೆಗೆ ಹೈಕೋರ್ಟ್‌ ಅತೃಪ್ತಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 19:25 IST
Last Updated 9 ಜನವರಿ 2019, 19:25 IST

ಬೆಂಗಳೂರು: ‘ಕ್ಯಾಬ್‌ಗಳಲ್ಲಿನ ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸುವ ಕುರಿತಂತೆ ಸಾರಿಗೆ ಇಲಾಖೆ ನಿರ್ಲಕ್ಷ್ಯ ಧೋರಣೆ ತಳೆದಿದೆ’ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತಂತೆ ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ (ಬಿಎಸ್‌ಒಜಿ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯ
ಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಈಗಾಗಲೇ ಈ ಕುರಿತಂತೆ ನಿಯಮ ತಿದ್ದುಪಡಿ ಮಾಡಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಅದನ್ನು ಜಾರಿಗೊಳಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠ, ‘ಯಾಕೆ ಇನ್ನೂ ಆದೇಶ ಜಾರಿಯಾಗಿಲ್ಲ. ಇದು ಅಧಿಕಾರಿಗಳಿಗೆ ಗೊತ್ತಿಲ್ಲವೇ, ಗೊತ್ತಿಲ್ಲ ಎಂದಾದರೆ ಸಾರಿಗೆ ಇಲಾಖೆಗೆ ಕೋರ್ಟ್‌ ತಕ್ಕ ನಿರ್ದೇಶನ ನೀಡುತ್ತದೆ’ ಎಂದು ಎಚ್ಚರಿಸಿದರು.

‘ಮುಂದಿನ ವಿಚಾರಣೆ ವೇಳೆಗೆ ಆದೇಶ ಜಾರಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿ’ ಎಂದು ಇದೇ 23ಕ್ಕೆ ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

‘ಮಹಿಳಾ ಪ್ರಯಾಣಿಕರ ಮೇಲಿನ ಹಲ್ಲೆ ಹೆಚ್ಚಳ’:‘ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸಲು ಸಾರಿಗೆ ಇಲಾಖೆ ನಿಯಮ ತಿದ್ದುಪಡಿ ಮಾಡಿದೆ. ಆದರೆ ಅದನ್ನು ಜಾರಿಗೊಳಿಸಲು ಕ್ರಮ ಕೈಗೊಂಡಿಲ್ಲ’ ಎಂದು ಆಕ್ಷೇಪಿಸಿ ಈ ಅರ್ಜಿ ಸಲ್ಲಿಸಲಾಗಿದೆ.

‘ಕ್ಯಾಬ್‌ಗಳಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ಮೇಲೆ ಇತ್ತೀಚೆಗೆ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿವೆ’ ಎಂದು ಅರ್ಜಿದಾರರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.