ADVERTISEMENT

ಸ್ಥಳೀಯ ಸಂಸ್ಥೆ ವಾರ್ಡ್‌ ಮರು ವಿಂಗಡಣೆ ದಾಖಲೆ ಹಾಜರುಪಡಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 19:57 IST
Last Updated 3 ಜನವರಿ 2019, 19:57 IST

ಬೆಂಗಳೂರು: ‘ಮಹಾನಗರ ಪಾಲಿಕೆಗಳೂ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮರು ವಿಂಗಡಣೆಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿ ಹಾಗೂ ವಾರ್ಡ್‌ ಮರುವಿಂಗಡಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರಿಗೆ ಈ ಕುರಿತಂತೆ ನಿರ್ದೇಶನ ನೀಡಿದ ನ್ಯಾಯಪೀಠ, ಈ ಅರ್ಜಿಗಳು ಇತ್ಯರ್ಥಗೊಳ್ಳುವವರೆಗೆ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಮೌಖಿಕ ಸೂಚನೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ‘ಪ್ರತಿ ಹತ್ತು ವರ್ಷಗಳಿಗೊಮ್ಮೆ ಮೀಸಲಾತಿ ಆವರ್ತನೆ ಹಾಗೂ ಪುನಾರಾವರ್ತನೆ ನಡೆದರೆ, ಸಮಸ್ಯೆಗಳಿಗೆ ಕೊನೆಯೇ ಇಲ್ಲದಂತಾಗುತ್ತದೆ’ ಎಂದು ಆಕ್ಷೇಪಿಸಿದರು. ವಿಚಾರಣೆಯನ್ನು ಶುಕ್ರವಾರಕ್ಕೆ (ಜ.4) ಮುಂದೂಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.