ADVERTISEMENT

‘ನೀರಿ’ ನೇಮಕಕ್ಕೆ ತಾತ್ವಿಕ ಒಪ್ಪಿಗೆ: ಹೈಕೋರ್ಟ್‌ಗೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2019, 20:13 IST
Last Updated 14 ಆಗಸ್ಟ್ 2019, 20:13 IST

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಕೆರೆಗಳ ಸಮಗ್ರ ಅಧ್ಯಯನ ನಡೆಸಲು ರಾಷ್ಟ್ರೀಯ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ನೀರಿ) ನೇಮಕ ಮಾಡಬೇಕೆಂಬ ಹೈಕೋರ್ಟ್ ಆದೇಶಕ್ಕೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಸಲ್ಲಿಸಲಾಗಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಬಿಬಿಎಂಪಿ ಈ ಸಂಬಂಧ ವಿಸ್ತೃತ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸರ್ಕಾರ ಅನುಮೋದನೆ ನೀಡಲಿದೆ’ ಎಂದು ತಿಳಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಮುಂದಿನ ಎರಡು ವಾರಗಳಲ್ಲಿ ನೀರಿ ನೇಮಕ ಮಾಡಬೇಕು ಮತ್ತು ಅದಕ್ಕೆ ಅಗತ್ಯ ಹಣ ಬಿಡುಗಡೆ ಮಾಡಬೇಕು’ ಎಂದು ಆದೇಶಿಸಿತು.

ಇದೇ ವೇಳೆ, ‘ನಗರ ವ್ಯಾಪ್ತಿಯಲ್ಲಿನ 19 ಕೆರೆಗಳ ಜಾಗದಲ್ಲಿ ಕೆಂಪೇಗೌಡ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳನ್ನು ನಿರ್ಮಿಸಲಾಗಿದೆ’ ಎಂಬ ವಿವರಣೆಗೆ ನ್ಯಾಯಪೀಠ ಆಶ್ಚರ್ಯ ವ್ಯಕ್ತಪಡಿಸಿತು.

‘ಸರ್ಕಾರದ ಇಂತಹ ನಡೆ ಆಶ್ಚರ್ಯಕರ. ಕೆರೆಗಳ ಕಣ್ಮರೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ’ ಎಂದು ಎಚ್ಚರಿಸಿತು. ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಲಾಗಿದೆ.

ಸಿಟಿಜನ್ಸ್ ಆ್ಯಕ್ಷನ್‌ ಗ್ರೂಪ್‌ ಕಾರ್ಯದರ್ಶಿ ನೊಮಿತಾ ಚಾಂಡಿ, ಜೆ.ಪಿ ನಗರ 4ನೇ ಹಂತದ ಡಾಲರ್ಸ್‌ ಲೇ ಔಟ್‌ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗುಂಡಾ ಭಟ್‌, ಸಮರ್ಪಣಾ ಸ್ವಯಂ ಸೇವಾ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಹೊಸಮನಿ ಮತ್ತು ವಕೀಲೆ ಗೀತಾ ಮಿಶ್ರಾ ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.