ADVERTISEMENT

ಭಾರಿ ದಂಡ: ಎಚ್ಚರಿಕೆ ನೀಡಿದ ಹೈಕೋರ್ಟ್

ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ–ಮೀಸಲಾತಿ ವಿಳಂಬ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 22:02 IST
Last Updated 18 ಫೆಬ್ರುವರಿ 2020, 22:02 IST
   

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 198 ವಾರ್ಡ್‌ಗಳ ಮರುವಿಂಗಡಣೆ ಹಾಗೂ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಒದಗಿಸದ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಚಾಟಿ ಬೀಸಿರುವ ಹೈಕೋರ್ಟ್, ಭಾರೀ ಪ್ರಮಾಣದಲ್ಲಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡ್ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಸರ್ಕಾರದ ವಿರುದ್ಧ ಕಿಡಿ ಕಾರಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲ ವಿ.ಶ್ರೀನಿಧಿ, ‘ಬಿಬಿಎಂಪಿ ಹಾಲಿ ಅವಧಿ 2020ರ ಸೆಪ್ಟೆಂಬರ್‌ನಲ್ಲಿ ಮುಗಿಯಲಿದೆ. ಈಗಾಗಲೇ ವಾರ್ಡ್ ಮರು ವಿಂಗಡಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ರೋಸ್ಟರ್ ನಿಯಮದಂತೆ ಮೀಸಲಾತಿ ನಿಗದಿಗೆ ಕಾಲಾವಕಾಶ ಬೇಕು. ಜೂನ್ ಒಳಗೆ ಮೀಸಲಾತಿ ನಿಗದಿ ಪ್ರಕ್ರಿಯೆ ಮುಗಿಸಲಾಗುವುದು’ ಎಂದರು.

ADVERTISEMENT

ಆಕ್ಷೇಪ ವ್ಯಕ್ತಪಡಿಸಿದ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘2020ರ ಸೆ.11ಕ್ಕೆ ಹಾಲಿ ಚುನಾಯಿತ ಸದಸ್ಯರ ಅವಧಿ ಮುಗಿಯಲಿದೆ. ಅದರೊಳಗೆ ಚುನಾವಣೆ ನಡೆಯಬೇಕಿದೆ. ವಾರ್ಡ್ ಮರು ವಿಂಗಡಣೆ ಅಂತಿಮಗೊಳಿಸಲು ಹೆಚ್ಚೇನು ಸಮಯ ಹಿಡಿಯುವುದಿಲ್ಲ. ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಕೋರಲಾಗಿದೆ. ಅವಧಿ ಪೂರ್ಣಗೊಳ್ಳಲು ಒಂದು ವರ್ಷವಿರುವಾಗ ವಾರ್ಡ್ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ’ ಎಂದರು.

ಅದರಿಂದ ತೀವ್ರ ಅಸಮಾಧಾನಗೊಂಡ ಪೀಠ, ‘ವಾರ್ಡ್ ಮರು ವಿಂಗಡಣೆ ಹಾಗೂ ಮೀಸಲು ಪಟ್ಟಿ ಕಲ್ಪಿಸುವುದು ಸರ್ಕಾರದ ಕರ್ತವ್ಯ. ಸರ್ಕಾರ ತನ್ನ ಶಾಸನಬದ್ಧವಾದ ಕೆಲಸ ಮಾಡದೆ ನ್ಯಾಯಾಲಯಕ್ಕೆ ಆಯೋಗ ಅರ್ಜಿ ಸಲ್ಲಿಸುವ ಪರಿಸ್ಥಿತಿ ನಿರ್ಮಿಸಿದೆ. ಅದಕ್ಕಾಗಿ ಸರ್ಕಾರಕ್ಕೆ ವಿಧಿಸುವ ದಂಡದ ಮೊತ್ತ ₹10 ಲಕ್ಷಕ್ಕಿಂತ ಕಡಿಮೆ ಇರುವುದಿಲ್ಲ’ ಎಂದು ಹೇಳಿತು. ವಾರ್ಡ್ ಮರು ವಿಂಗಡಣೆ ಆರಂಭಿಸಿದ್ದು ಯಾವಾಗ? ಕಳೆದ ಚುನಾವಣೆ ವೇಳೆ 2011ರ ಜನಗಣತಿ ಆಧರಿಸಿ ವಾರ್ಡ್ ಮರು ವಿಂಗಡಣೆ ಮಾಡಲಾಗಿದೆಯೇ? ಎಂದು ಮಾಹಿತಿ ನೀಡಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿದ ಪೀಠ, ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.