ADVERTISEMENT

ಬ್ಯಾನರ್‌ ಅಳವಡಿಸಲು ಅನುಮತಿ ಕೋರಿ ಹೈಕೋರ್ಟ್‌ಗೆ ಮನವಿ ಮಾಡಿದ ಬಿಬಿಎಂಪಿ

ಪ್ರಚಾರ ಅಭಿಯಾನ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2019, 20:07 IST
Last Updated 22 ಫೆಬ್ರುವರಿ 2019, 20:07 IST
   

ಬೆಂಗಳೂರು: 2019ರ ಲೋಕಸಭಾ ಚುನಾವಣೆ ವೇಳೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಹೋರ್ಡಿಂಗ್ಸ್ ಮತ್ತು ಬ್ಯಾನರ್‌ಗಳನ್ನು ಅಳವಡಿಸಲು ಅನುಮತಿ ನೀಡುವಂತೆ ಬಿಬಿಎಂಪಿ ಹೈಕೋರ್ಟ್‌ಗೆ ಮನವಿ ಮಾಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್‌, ಹೋರ್ಡಿಂಗ್ಸ್‌ ತೆರವು ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್‌) ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ ಈ ಮನವಿ ಸಲ್ಲಿಸಿದರು.

ADVERTISEMENT

’ಚುನಾವಣೆಯಲ್ಲಿ ಆಯೋಗದ ಪ್ರಚಾರ ಅಭಿಯಾನಕ್ಕೆ ಅನುವಾಗುವಂತೆ ಅಂಚೆ ಕಚೇರಿ, ಬ್ಯಾಂಕ್, ಎಟಿಎಂ, ಆಸ್ಪತ್ರೆ, ಶಾಲಾ ಕಾಲೇಜುಗಳು, ಪ್ರಮುಖ ಜಂಕ್ಷನ್‌ಗಳು, ಮೆಟ್ರೋ ರೈಲು ಹಾಗೂ ಬಸ್‌ ನಿಲ್ದಾಣ, ಮಾರ್ಕೆಟ್ ಪ್ರದೇಶಗಳು ಮತ್ತು ವಿಶ್ವವಿದ್ಯಾಲಯಗಳ ಬಳಿ ಹೋರ್ಡಿಂಗ್ಸ್ ಮತ್ತು ಬ್ಯಾನರ್ ಅಳವಡಿಸಲು ಅನುಮತಿ ನೀಡಬೇಕು' ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದರು.

ಈ ಕುರಿತಂತೆ ಮಾರ್ಚ್ 8ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.