ADVERTISEMENT

ಜೀವ ಬೆದರಿಕೆ | ಮಹೇಶ್ ಜೋಶಿಗೆ ಭದ್ರತೆ ಒದಗಿಸಿ: ಹೈಕೋರ್ಟ್ ಮೌಖಿಕ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2025, 9:21 IST
Last Updated 26 ಏಪ್ರಿಲ್ 2025, 9:21 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ತಮಗೆ ಜೀವ ಬೆದರಿಕೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ್ಯ ಮಹೇಶ್ ಜೋಶಿ ಅವರಿಗೆ ಅಗತ್ಯವಿದ್ದರೆ ಸೂಕ್ತ ಭದ್ರತೆ ಒದಗಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ನಿರ್ದೇಶನ ನೀಡಿದೆ.

ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ‘ಜೋಶಿ ಅವರಿಗೆ ಅಗತ್ಯವಿದ್ದರೆ ಸೂಕ್ತ ಭದ್ರತೆಯನ್ನು ಒದಗಿಸಿ’ ಎಂದು ಪ್ರಾಸಿಕ್ಯೂಷನ್ ಪರ ಹಾಜರಿದ್ದ ರಾಹುಲ್ ಕಾರ್ಯಪ್ಪ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ ಲಿಖಿತ ಆದೇಶವನ್ನು ಕಾಯ್ದಿರಿಸಿತು.

ADVERTISEMENT

‘ಕಳೆದ ವರ್ಷ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿದ ಗಳಿಗೆಯಿಂದ ನನಗೆ ಜೀವ ಬೆದರಿಕೆಯ ಆಡಿಯೊ-ವಿಡಿಯೊ ಕರೆಗಳು ಬರುತ್ತಿವೆ. ಇದರಿಂದ ನನ್ನ ಜೀವಕ್ಕೆ ಅಪಾಯವಿದ್ದು, 24x7 ಭದ್ರತೆ ಒದಗಿಸುವ ಗನ್‌ಮೆನ್‌ ಜೊತೆಗೆ ಸೂಕ್ತ ಪೊಲೀಸ್‌ ರಕ್ಷಣೆ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಮಹೇಶ್ ಜೋಶಿ ಕೋರಿದ್ದಾರೆ. ಜೋಶಿ ಪರ ಪದಾಂಕಿತ ಹಿರಿಯ ವಕೀಲ ಎಸ್‌.ಬಸವರಾಜು ವಾದ ಮಂಡಿಸಿದ್ದರು. ಹೈಕೋರ್ಟ್ ವಕೀಲ ಎಂ.ಉದಯ ಶಂಕರ್ ವಕಾಲತ್ತು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.