ADVERTISEMENT

ಬರ: ನೆರೆ ರಾಜ್ಯಗಳ ನೀತಿ ಅಳವಡಿಕೆಗೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 19:34 IST
Last Updated 12 ಜುಲೈ 2019, 19:34 IST
   

ಬೆಂಗಳೂರು: ‘ಬರಪೀಡಿತ ಪ್ರದೇಶಗಳಲ್ಲಿ ಜಾನುವಾರ ಶಿಬಿರ ತೆರೆಯುವ ಹಾಗೂ ಪ್ರತಿ ಜಾನುವಾರಿಗೆ ದಿನವೊಂದಕ್ಕೆ ಒದಗಿಸುವ ಮೇವಿನ ಪ್ರಮಾಣದ ಬಗ್ಗೆ ನೆರೆ ರಾಜ್ಯಗಳಲ್ಲಿ ಅಳವಡಿಸಿಕೊಳ್ಳಲಾಗಿರುವ ನೀತಿಯನ್ನು ಅಳವಡಿಸಿಕೊಳ್ಳಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಮೌಖಿಕ ನಿರ್ದೇಶನ ನೀಡಿದೆ.

‘ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಮತ್ತು ಮೇವು ವ್ಯವಸ್ಥೆ ಮಾಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಚೇಳೂರು ಗ್ರಾಮದ ಎ.ಮಲ್ಲಿಕಾರ್ಜುನ ಹಾಗೂ ಸಾರ್ವಜನಿಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಪೀಠವು, ‘ಸರ್ಕಾರ ಈ ವಿಷಯದಲ್ಲಿ ಯಾವುದೇ ವೈಜ್ಞಾನಿಕ ವಿಧಾನ ಹಾಗೂ ಸ್ಪಷ್ಟ ನೀತಿ ಹೊಂದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

ADVERTISEMENT

‘ಈ ಸಂಬಂಧ ನೀತಿ ರೂಪಿಸುವ ಬಗ್ಗೆ ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದ ಮಾಹಿತಿ ತರಿಸಿಕೊಂಡು ಅದರ ಆಧಾರದಲ್ಲಿ ತೀರ್ಮಾನ ತೆಗೆದುಕೊಳ್ಳಿ’ ಎಂದು ಗಡುವು ನೀಡಿತು. ವಿಚಾರಣೆಯನ್ನು ಇದೇ 17ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.