ADVERTISEMENT

ಮನೆ ಮನೆ ಸಮೀಕ್ಷೆಗೆ ಹೈಕೋರ್ಟ್‌ ಗಡುವು

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸುವ ಕಾರ್ಯ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 21:14 IST
Last Updated 16 ಮಾರ್ಚ್ 2020, 21:14 IST
   

ಬೆಂಗಳೂರು: ‘ಮುಂಬರುವ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಕಡ್ಡಾಯವಾಗಿ ಮನೆ-ಮನೆ ಸಮೀಕ್ಷೆ ನಡೆಸಬೇಕಾಗಿದ್ದು, ಈ ಕಾರ್ಯವನ್ನು 2020ರ ಏಪ್ರಿಲ್ 30ರೊಳಗೆ ಪೂರ್ಣಗೊಳಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಸಮೀಕ್ಷೆಗೆ ಸ್ವಸಹಾಯ ಗುಂಪು ಹಾಗೂ ಎನ್‌ಜಿಒಗಳನ್ನು ಬಳಸಿಕೊಳ್ಳಬಹುದು. ದಾಖಲೆಗಳನ್ನು ನಿರ್ವಹಿಸುವ ಜವಾಬ್ದಾರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಮೇಲಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು’ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ADVERTISEMENT

‘14 ವರ್ಷದೊಳಗಿನ ಮಕ್ಕಳ ದಾಖಲೆಯನ್ನು ಪ್ರತಿ ಶೈಕ್ಷಣಿಕ ವರ್ಷ ಆರಂಭವಾಗುವ ಕನಿಷ್ಠ 6 ವಾರಗಳ ಮೊದಲೇ ತಯಾರಿಸಬೇಕು. ಶೈಕ್ಷಣಿಕ ವರ್ಷ ಆರಂಭಗೊಳ್ಳುವ 2 ತಿಂಗಳ ಮುಂಚೆಯೇ ದಾಖಲೆಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದು ಹೇಳಿದೆ.

‘ಗೈರು ಹಾಜರಾದ ಮಕ್ಕಳ ಪೋಷಕರಿಗೆ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಲು ಪ್ರಯಾಣ ಭತ್ಯೆ ನೀಡುವುದಿಲ್ಲ ಎಂಬ ನಿರ್ಧಾರ ಮರು ಪರಿಶೀಲಿಸಬೇಕು. ಶಿಕ್ಷಣ ಸಂಯೋಜಕರ (ಹಾಜರಾತಿ ಪ್ರಾಧಿಕಾರ) ಖಾಲಿ ಹುದ್ದೆಗಳನ್ನು ಒಂದು ತಿಂಗಳಲ್ಲಿ ಭರ್ತಿ ಮಾಡಬೇಕು. ಇವರಿಗೆ ಪ್ರತಿ ತಿಂಗಳು ₹ 500 ನೀಡುವ ಈಗಿನ ನಿರ್ಧಾರವನ್ನು ಸರ್ಕಾರ ಪುನರ್‌ ಪರಿಶೀಲಿಸಬೇಕು’ ಎಂದು ನಿರ್ದೇಶಿಸಿದೆ. ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.