ADVERTISEMENT

ಕೆರೆಗೆ ಚರಂಡಿ ನೀರು ಹರಿಯಬಿಡುತ್ತಿದ್ದೀರಾ..? ಬಿಬಿಎಂಪಿಗೆ ವಿವರ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 6 ಜೂನ್ 2019, 11:05 IST
Last Updated 6 ಜೂನ್ 2019, 11:05 IST
   

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇರುವ ಕೆರೆಗಳಿಗೆ ಹರಿಯಬಿಡುವ ಚರಂಡಿ ನೀರನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ಸಲ್ಲಿಸಿ’ ಎಂದು ಹೈಕೋರ್ಟ್ ಬಿಬಿಎಂಪಿಗೆ ಆದೇಶಿಸಿದೆ.

‘ಬಿಬಿಎಂಪಿ ವ್ಯಾಪ್ಯಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು’ ಎಂದು ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು, ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ನಗರದ ಕೆರೆಗಳ ಬಗ್ಗೆ ಪ್ರಸ್ತಾಪಿಸಿದರು.

ADVERTISEMENT

ಇದನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಓಕಾ ಅವರು, ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಕೀಲರನ್ನು ಉದ್ದೇಶಿಸಿ, ‘184 ಕೆರೆಗಳಲ್ಲಿ ಎಷ್ಟು ಕೆರೆಗಳ ಪುನರುಜ್ಜೀವನ ಕಾರ್ಯ ಕೈಗೊಳ್ಳಲಾಗಿದೆ. ಇವುಗಳಿಗೆ ತ್ಯಾಜ್ಯ ನೀರನ್ನು ಏನಾದರೂ ಹರಿಯಬಿಡಲಾಗುತ್ತಿದೆಯೇ ಹೇಗೆ ಎಂದು ನಾಳೆಯೇ ತಿಳಿಸಬೇಕು’ ಎಂದು ನಿರ್ದೇಶಿಸಿದರು.

‘ನೀವು ತಿಳಿಸುವ ವಿವರ ಸತ್ಯಾಂಶಗಳಿಂದ ಕೂಡಿರಬೇಕು. ಒಂದು ವೇಳೆ ವಾಸ್ತವಕ್ಕೂ ವರದಿಗೂ ವ್ಯತ್ಯಾಸ ಕಂಡುಬಂದರೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
ಇದೇ 8ಕ್ಕೆ ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.