ADVERTISEMENT

ಆಸ್ತಿ ವಿವರ: 34 ಪಾಲಿಕೆ ಸದಸ್ಯರಿಗೆ ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 19:55 IST
Last Updated 1 ಜುಲೈ 2019, 19:55 IST

ಬೆಂಗಳೂರು: ಆಸ್ತಿ ಹಾಗೂ ಸಾಲದ ವಿವರಗಳನ್ನು ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಪಾಲಿಕೆಯ 34 ಸದಸ್ಯರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

‘ಕರ್ನಾಟಕ ಪೌರಾಡಳಿತ ಕಾಯ್ದೆ-1979ರ ಅನ್ವಯ ಆಸ್ತಿ ವಿವರ ಘೋಷಿಸದ 34 ಸದಸ್ಯರ ಆಯ್ಕೆಯನ್ನು ಅನೂರ್ಜಿತಗೊಳಿಸುವಂತೆ ಆದೇಶಿಸಬೇಕು’ ಎಂದು ಕೋರಿ ಅನಿಲ್ ಕುಮಾರ್ ಶೆಟ್ಟಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ರಾಜ್ಯ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಪ್ರಾದೇಶಿಕ ಆಯುಕ್ತರು ಮತ್ತು ಆಸ್ತಿ ವಿವರ ಸಲ್ಲಿಸದ 34 ಸದಸ್ಯರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

‘ಆಸ್ತಿ ವಿವರ ಸಲ್ಲಿಸದ ಸದಸ್ಯರನ್ನು ಅವರ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಬಿಬಿಎಂಪಿ ಪ್ರಾದೇಶಿಕ ಆಯುಕ್ತರು ಪರಿಗಣಿಸಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪಣೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.