ADVERTISEMENT

ಟೆಕಿ ಅಜಿತಾಬ್ ನಾಪತ್ತೆ ಹೈಕೋರ್ಟ್‌ಗೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 20:15 IST
Last Updated 5 ಜುಲೈ 2018, 20:15 IST
ಅಜಿತಾಬ್
ಅಜಿತಾಬ್   

ಬೆಂಗಳೂರು: ಟೆಕಿ ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಡೆಸಲಾಗಿರುವ ವಿಶೇಷ ವಿಚಾರಣೆಯ ವಿವರಗಳನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಅಜಿತಾಬ್ ತಂದೆ ಅಶೋಕ್‌ ಕುಮಾರ್ ಸಿನ್ಹಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲ ವಿ.ಶ್ರೀನಿಧಿ ಈ ಕುರಿತ ವಿವರಗಳನ್ನು ಒಳಗೊಂಡ ಮುಚ್ಚಿದ ಲಕೋಟೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ವಿವರ ಪರಿಶೀಲಿಸಿದ ನ್ಯಾಯಪೀಠ ಪೊಲೀಸರ ಕಾರ್ಯವೈಖರಿಗೆ ತೃಪ್ತಿ ವ್ಯಕ್ತಪಡಿಸಿ ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿದೆ.

ADVERTISEMENT

ಪ್ರಕರಣವೇನು?: ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಕುಮಾರ್ ಅಜಿತಾಬ್ 2017ರ ಡಿಸೆಂಬರ್ 18ರ ಸಂಜೆ 6.30ಕ್ಕೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಮಾರ್ ತಂದೆ ಅಶೋಕ್ ಕುಮಾರ್ ಸಿನ್ಹಾ ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಪೊಲೀಸರು ಡಿ.20ರಂದು ಹಾಗೂ 29 ರಂದು ಎರಡು ಎಫ್‌ಐಆರ್ ದಾಖಲಿಸಿದ್ದರು.

ಏತನ್ಮಧ್ಯೆ ಸಿನ್ಹಾ, ‘ಪೊಲೀಸರು ಈವರೆಗೂ ನನ್ನ ಮಗನನ್ನು ಪತ್ತೆ ಹಚ್ಚಿಲ್ಲ. ಆದ್ದರಿಂದ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.