ADVERTISEMENT

ಫ್ಲೆಕ್ಸ್ ತೆರವು ಕಾರ್ಯಾಚರಣೆ ವೇಳೆ ಹಲ್ಲೆ: 22 ಮಂದಿ ತಪ್ಪಿತಸ್ಥರು

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2018, 7:37 IST
Last Updated 20 ಆಗಸ್ಟ್ 2018, 7:37 IST
   

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆ ವೇಳೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ 22 ಜನ ಆರೋಪಿಗಳನ್ನು ತಪ್ಪಿತಸ್ಥರೆಂದು ಗುರುತಿಸಲಾಗಿದೆ‌.

ಈ ಸಂಗತಿಯನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಸೋಮವಾರ ಹೈಕೋರ್ಟ್‌ಗೆ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್ ತೆರವಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ಮುಂದುವರಿಸಿತು.

ADVERTISEMENT

ವಿಚಾರಣೆ ವೇಳೆ ಪೊನ್ನಣ್ಣ ಈ ವಿಷಯವನ್ನು ನ್ಯಾಯಪೀಠಕ್ಕೆ ವಿವರಿಸಿ, ‘234 ಪ್ರಕರಣಗಳಲ್ಲಿ 22 ಜನರನ್ನು ತಪ್ಪಿತಸ್ಥರೆಂದು ಗುರುತಿಸಲಾಗಿದೆ" ಎಂದರು.

ಅಧಿಕಾರಿಗಳೇ ಹೊಣೆ: ‘ಫ್ಲೆಕ್ಸ್, ಹೋರ್ಡಿಂಗ್ಸ್ ತೆರವು ಇನ್ನೂ ಎಷ್ಟು ಬಾಕಿ ಇದೆ’ ಎಂದು ಮುಖ್ಯ ನ್ಯಾಯಮೂರ್ತಿಗಳು ಬಿಬಿಎಂಪಿ ಪರ ವಕೀಲರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ, ‘ಎಂಟನೇ ಮೈಲಿಕಲ್ಲು ಪ್ರದೇಶದಲ್ಲಿರುವ ಫ್ಲೆಕ್ಸ್‌ಗಳನ್ನು ಇನ್ನೂ ತೆರವು ಮಾಡಿಲ್ಲ. ಈ ಪ್ರದೇಶದಲ್ಲಿ ಫ್ಲೆಕ್ಸ್ ತೆರವಿಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ಇದೆ’ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ದಿನೇಶ್ ಮಾಹೇಶ್ವರಿ, ‘ಕರ್ತವ್ಯ ನಿರ್ವಹಣೆಯಲ್ಲಿ ಶೇ. 1ರಷ್ಟು ಕೊರತೆಯನ್ನೂ ಕೋರ್ಟ್ ಒಪ್ಪಿಕೊಳ್ಳಲು ತಯಾರಿಲ್ಲ. ಅಧಿಕಾರಿಗಳು ತಮ್ಮ ಕೆಲಸವನ್ನು ಇನಿತೂ ಲೋಪವಿಲ್ಲದೆ ನಿರ್ವಹಿಸಬೇಕು’ ಎಂದು ತಾಕೀತು ಮಾಡಿದರು.

ವಿಚಾರಣೆಯನ್ನು ಮಂಗಳವಾರಕ್ಕೆ (ಆ.21) ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.