ಸಂಸದ ಸುಧಾಕರ್
ಬೆಂಗಳೂರು: ‘ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಬಾಬು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಡಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು’ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
‘ನನ್ನ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಡಾ.ಕೆ.ಸುಧಾಕರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ‘ಪ್ರಕರಣದ ತನಿಖೆಗೆ ಸಹಕರಿಸಿ’ ಎಂದು ಸುಧಾಕರ್ ಅವರಿಗೆ ನಿರ್ದೇಶಿಸಿದೆ.
ಸುಧಾಕರ್ ಪರ ಪದಾಂಕಿತ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಅವರ ವಾದ ಆಲಿಸಿದ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಹೈಕೋರ್ಟ್ ಅನುಮತಿ ಪಡೆಯದೇ ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತಿಲ್ಲ’ ಎಂದು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರಿಗೆ ಆದೇಶಿಸಿತು.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗೆ ನೋಟಿಸ್ ಹಾಗೂ ಮೃತ ಬಾಬು ಪತ್ನಿ ಎನ್.ಶಿಲ್ಪಾ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು. ರಾಜ್ಯ ಸರ್ಕಾರದ ಪರ ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ವಾದ ಮಂಡಿಸಿದರು.
ಆರೋಪಿ ಡಾ.ಕೆ.ಸುಧಾಕರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್‌ಎಸ್) ಕಲಂ 108 (ಆತ್ಮಹತ್ಯೆಗೆ ಪ್ರಚೋದನೆ), 352 (ಉದ್ದೇಶಪೂರ್ವಕ ಅಪಮಾನ) 351(2) (ಕ್ರಿಮಿನಲ್ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ತಿದ್ದುಪಡಿ ಕಾಯ್ದೆ-2015ರ ಕಲಂ 3(2)(ವಿ) ಅಡಿ ಇದೇ 7ರಂದು ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.