ADVERTISEMENT

ಮೂವರು ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್‌ ನೋಟಿಸ್‌

ಭದ್ರಾ ಬಲದಂಡೆ: ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 5 ಜುಲೈ 2019, 19:27 IST
Last Updated 5 ಜುಲೈ 2019, 19:27 IST
   

ಬೆಂಗಳೂರು: ‘ಭದ್ರಾ ಯೋಜನೆಯ ಬಲದಂಡೆ ಮುಖ್ಯ ಕಾಲುವೆ, ದಾವಣಗೆರೆ ಹಾಗೂ ಮಲೇಬೆನ್ನೂರು ಶಾಖಾ ಕಾಲುವೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‍ಸೆಟ್, ಡೀಸೆಲ್ ಜನರೇಟರ್ ತೆರವುಗೊಳಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಹೊಳೆ ಸಿರಿಗೆರೆಯ ಎಂ. ತಿಪ್ಪೇರುದ್ರಪ್ಪ ಸೇರಿದಂತೆ ಏಳು ಗ್ರಾಮಸ್ಥರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ನೀರಾವರಿ ಇಲಾಖೆ ಕಾರ್ಯದರ್ಶಿ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಸೇರಿದಂತೆ ಒಂಬತ್ತು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

ಆಕ್ಷೇಪಣೆ ಏನು?: ‘ಅನಧಿಕೃತವಾಗಿ ಪಂಪ್‍ಸೆಟ್‍ ಹಾಗೂ‌ ಡೀಸೆಲ್ ಜನರೇಟರ್‌ ಅಳವಡಿಸಿರುವುದರಿಂದ ಬೇಸಿಗೆ ಹಂಗಾಮಿನಲ್ಲಿ ಕಾಲುವೆಗಳಿಗೆ ನೀರು ಹರಿಸಿದರೂ ಅಚ್ಚುಕಟ್ಟು ಪ್ರದೇಶದ ಅಂಚಿನ ಗ್ರಾಮಗಳಿಗೆ ನೀರು ತಲುಪುತ್ತಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.