ADVERTISEMENT

ಆಂಬುಲೆನ್ಸ್ ಸುಗಮ ಸಂಚಾರಕ್ಕೆ ಸಹಾಯವಾಣಿ: ಅರ್ಜಿ ವಿಲೇವಾರಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2023, 20:25 IST
Last Updated 11 ಜನವರಿ 2023, 20:25 IST
ಆಂಬುಲೆನ್ಸ್
ಆಂಬುಲೆನ್ಸ್   

ಬೆಂಗಳೂರು: ‘ಸಂಚಾರ ದಟ್ಟಣೆಯಲ್ಲಿ, ತುರ್ತು ಸಂದರ್ಭದ ಗೋಲ್ಡನ್ ಅವಧಿಯಲ್ಲಿ ರೋಗಿಗಳು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ವಿಶೇಷ ತುರ್ತು ಸೇವೆ ಆರಂಭಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ, ‘ಭಾರತ್ ಪುನರುತ್ಥಾನ ಟ್ರಸ್ಟ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ, ಕರ್ನಾಟಕ ರಸ್ತೆ ಸುರಕ್ಷತೆ ಪ್ರಾಧಿಕಾರದ ಜಂಟಿ ಆಯುಕ್ತ ಹಾಗೂ ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಉಪ ಕಾರ್ಯದರ್ಶಿಯವರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡು, ಸರ್ಕಾರದ ಕ್ರಮಕ್ಕೆ ಶ್ಲಾಘಿಸಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿ ಆದೇಶಿಸಿತು.

ADVERTISEMENT

ಸಹಾಯವಾಣಿ: ‘ಆಂಬುಲೆನ್ಸ್‌ಗಳು ಸಂಚಾರ ಆರಂಭಿಸಿದಾಗ ಮತ್ತು ರೋಗಿಗಳನ್ನು ತುರ್ತು ಚಿಕಿತ್ಸೆಗೆ ರವಾನಿಸುವಾಗ ಸಂಚಾರ ದಟ್ಟಣೆಯಲ್ಲಿ ಸಿಲುಕಿದರೆ, ವಾಹನ ದಟ್ಟಣೆ ನಿವಾರಿಸಲು ಸಂಚಾರ ಪೊಲೀಸರ ವತಿಯಿಂದ ವಿಶೇಷವಾದ ತುರ್ತು ಸಹಾಯವಾಣಿ ಸೇವೆ ಮತ್ತು ಸ್ಥಿರ ದೂರವಾಣಿ ಸಂಖ್ಯೆಯ ವ್ಯವಸ್ಥೆ ಮಾಡಲಾಗಿದೆ’ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.

‘ದಟ್ಟಣೆಯಲ್ಲಿ ಸಿಲುಕಿದಾಗ ಇಆರ್‌ಎಸ್‌ಎಸ್‌ (ಎಮರ್ಜೆನ್ಸಿ ರೆಸ್ಪಾನ್ಸ್‌ ಸಪೋರ್ಟ್‌ ಸಿಸ್ಟಂ–ಇಆರ್‌ಎಸ್‌ಎಸ್) ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು. ಈ ಸಂಖ್ಯೆಯನ್ನು ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪರ ಮತ್ತು ಕೋಲಾರ ಜಿಲ್ಲೆಗಳ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳ ಆಂಬುಲೆನ್ಸ್‌ಗಳಿಗೆ ನೀಡಲಾಗಿದೆ’ ಎಂದು ತಿಳಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 112 ಅಥವಾ ಸ್ಥಿರ ದೂರವಾಣಿ ಸಂಖ್ಯೆಗಳು 080-22943030, 080-22943131, 080-22943663 ಹಾಗೂ 080-22943684ಕ್ಕೆ ಕರೆ ಮಾಡಿ ಸಂಚಾರ ದಟ್ಟಣೆ ನಿವಾರಿಸುವಂತೆ ಕೋರಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.