ADVERTISEMENT

ತೃತೀಯ ಲಿಂಗಿಗಳಿಗೆ ಹಾಸ್ಟೆಲ್‌: ಸರ್ಕಾರಕ್ಕೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2022, 20:22 IST
Last Updated 24 ಮಾರ್ಚ್ 2022, 20:22 IST
ಹೈಕೋರ್ಟ್‌
ಹೈಕೋರ್ಟ್‌    

ಬೆಂಗಳೂರು: ‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ನಿರ್ದೇಶಿಸಬೇಕು‘ ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ (ಯುಜಿಸಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ರಾಜ್ಯದ ಪ್ರಥಮ ತೃತೀಯ ಲಿಂಗಿ ಡಾ. ತ್ರಿನೇತ್ರಾ ಹಲ್ದಾರ್ ಗುಮ್ಮರಾಜು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಹಾಗೂ ಯುಜಿಸಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ತುರ್ತು ನೋಟಿಸ್ ಜಾರಿಗೆ ಆದೇಶಿಸಿತು. ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಜೂನ್‌ 6ಕ್ಕೆ ಮುಂದೂಡಿತು.

ADVERTISEMENT

ಆಕ್ಷೇಪವೇನು?: ‘ರಾಜ್ಯದಲ್ಲಿ ಈತನಕ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಗಾಗಿ ಯಾವುದೇ ನಿರ್ದಿಷ್ಟ ನಿಯಮ ರೂಪಿಸಲಾಗಿಲ್ಲ. 2020ರ ಅಧಿನಿಯಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಶಿಕ್ಷಣವನ್ನೂ ಸೇರಿಸಲಾಗಿದೆ. ಆದರೆ, ಉನ್ನತ ಶಿಕ್ಷಣದ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಒದಗಿಸಲು ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘2020ರ ಸೆಪ್ಟೆಂಬರ್ 25ರಂದು ತೃತೀಯ ಲಿಂಗಿಗಳ (ಹಕ್ಕುಗಳ ಸಂರಕ್ಷಣೆ) ಅಧಿನಿಯಮ-2020 ಜಾರಿಗೆ ಬಂದಿದೆ. ಅದರ ನಿಯಮ10ರ ಪ್ರಕಾರ ತೃತೀಯ ಲಿಂಗಿಗಳಿಗೆ ತಾತ್ಕಾಲಿಕ ಶೆಲ್ಟರ್‌ಗಳಷ್ಟೇ ಅಲ್ಲದೆ ಸ್ಟೇ ಹೋಂ ಹಾಗೂ ತಂಗುವಿಕೆಗೆ ಪ್ರತ್ಯೇಕ ವ್ಯವಸ್ಥೆ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳು ಹಾಗೂ ಶೌಚಗೃಹಗಳು ಸೇರಿ ಸಾಂಸ್ಥಿಕ ಮೂಲಸೌಕರ್ಯಗಳನ್ನು ಸರ್ಕಾರ ಕಲ್ಪಿಸಿಕೊಡಬೇಕಿದೆ’ ಎಂಬ ಅಂಶವನ್ನು ಅರ್ಜಿಯಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.