ADVERTISEMENT

ನ್ಯಾಯಾಂಗ ನಿಂದನೆ: ರಾಕೇಶ್‌ ಸಿಂಗ್‌, ಅರ್ಚನಾ ಖುದ್ದು ಹಾಜರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 19:54 IST
Last Updated 1 ಜೂನ್ 2022, 19:54 IST

ಬೆಂಗಳೂರು: ‘ರಾಜ್ಯದ ವಿವಿಧ ಪೌರಾಡಳಿತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್-ಸಿ ಸಿಬ್ಬಂದಿಯನ್ನು ಗ್ರೂಪ್-ಬಿಗೆ ವಿಲೀನಗೊಳಿಸುವ ವಿಚಾರದಲ್ಲಿ ಕರಡು ನಿಯಮಗಳನ್ನು ಪ್ರಕಟಿಸದೇ ಇರುವ ಬಗ್ಗೆ ವಿವರಣೆ ನೀಡಲು ಇದೇ 6ರಂದು ವಿಚಾರಣೆಗೆ ಖುದ್ದು ಹಾಜರಾಗಬೇಕು’ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ, ‘ಕರ್ನಾಟಕ ನಗರಪಾಲಿಕೆ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಗ್ರೂಪ್-ಸಿ ಉದ್ಯೋಗಗಳನ್ನು ಗ್ರೂಪ್-ಬಿಗೆ ವಿಲೀನಗೊಳಿಸುವ ನಿಟ್ಟಿನಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. ಆ ಕುರಿತು ಎರಡು ತಿಂಗಳಲ್ಲಿ ಕರಡು ನಿಯಮಗಳನ್ನು ಪ್ರಕಟಿಸುವಂತೆ 2021ರ ಜುಲೈ 19ರಂದು ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ. ಆದರೆ, ಈವರೆಗೂ ಕರಡು ನಿಯಮಗಳನ್ನು ಪ್ರಕಟಿಸಿಲ್ಲ. ಇದರಿಂದ ಕೋರ್ಟ್ ಆದೇಶ ಉಲ್ಲಂಘನೆ ಆಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ’ ಎಂದು ನಗರಾಭಿವೃದ್ಧಿ ಇಲಾಖೆಯ ಬಗ್ಗೆ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

‘ಪ್ರಕರಣದ ಕುರಿತಂತೆ ವಿವರಿಸಲು ಇದೇ 6ರಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಪೌರಾಡಳಿತ ನಿರ್ದೇ
ಶನಾಲಯದ ನಿರ್ದೇಶಕಿ ಎಂ.ಎಸ್. ಅರ್ಚನಾ ವಿಚಾರಣೆಗೆ ಖುದ್ದು ಹಾಜರಾಗಬೇಕು’ ಎಂದು ನಿರ್ದೇಶಿಸಿದ ನ್ಯಾಯಪೀಠ ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.