ADVERTISEMENT

ರಸ್ತೆ ಗುಂಡಿ ಮುಚ್ಚುವ ಯಂತ್ರದ ಮೊತ್ತ ಎಷ್ಟು: ಹೈಕೋರ್ಟ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 31 ಮೇ 2022, 19:31 IST
Last Updated 31 ಮೇ 2022, 19:31 IST
ಹೈಕೋರ್ಟ್
ಹೈಕೋರ್ಟ್    

ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಳಸಲಾಗುತ್ತಿರುವ ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟು ಹಣ ಪಾವತಿಸಲಾಗುತ್ತದೆ ಎಂಬ ಬಗ್ಗೆ ಪರಿಶೀಲಿಸಿ ಜೂನ್ 6 ರಂದು ವರದಿ ಸಲ್ಲಿಸಿ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ನಿರ್ದೇಶಿಸಿದೆ.

‘ನಗರ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಕೋರಿ ವಿಜಯನ್ ಮೆನನ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ಬಿಬಿಎಂಪಿ ಮುಖ್ಯ ಆಯುಕ್ತರು ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟು ಹಣ ಪಾವತಿಸಲಾಗುತ್ತದೆ ಎಂಬ ಬಗ್ಗೆ ವೈಯಕ್ತಿಕವಾಗಿ ಪರಿಶೀಲನೆ ನಡೆಸಿ ನಿರ್ಧರಿಸಲು ಉದ್ದೇಶಿಸಿದ್ದಾರೆ. ಅಲ್ಲದೆ, ಫೈಥಾನ್ ಯಂತ್ರ ಬಳಸಿ ಗುಂಡಿ ಮುಚ್ಚುವ ಕಾರ್ಯದ ಗುತ್ತಿಗೆ ಪಡೆದಿರುವ ಅಮೆರಿಕ್ ರೋಡ್ ಟೆಕ್ನಾಲಜೀಸ್ ಸಲ್ಯೂಷನ್ಸ್‌ಗೆ (ಎಆರ್‌ಟಿಸಿ) ಬಾಕಿ ಹಣ ಪಾವತಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು’ ಎಂಬ ಕೋರಿದರು.

ADVERTISEMENT

ಇದಕ್ಕೂ ಮುನ್ನ ಎಆರ್‌ಟಿಎಸ್
ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ, ‘ರಸ್ತೆ ಗುಂಡಿ ಮುಚ್ಚಲು ಪೈಥಾನ್
ಯಂತ್ರ ಬಳಸುವುದಕ್ಕೆ ಲೋಕೋಪಯೋಗಿ ಇಲಾಖೆ ನಿಗದಿಪಡಿಸಿರುವ ಪ್ರತಿ ಗಂಟೆಗೆ ₹1,249 ನೀಡುವಂತೆ ಎಆರ್‌ಟಿಎಸ್ ಕೋರಿದೆ. ಆದರೆ, ಬಿಬಿಎಂಪಿ
ಕಡಿಮೆ ಹಣ ಪಾವತಿಸಲು ಮುಂದಾಗಿದೆ. ಇದೇ ವಿಚಾರವಾಗಿ ಸಮಾಲೋಚಿಸಲು ಮೇ 27ರಂದು ಕರೆದಿದ್ದ ಸಭೆಯಲ್ಲಿ ಬಿಬಿಎಂಪಿ
ರಸ್ತೆ ಮೂಲಸೌಕರ್ಯ ವಿಭಾಗದ
ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್, ಎಆರ್‌ಟಿಎಸ್ ಕಂಪನಿಯ ವ್ಯವಸ್ಥಾಪಕಿಯ ಪತಿಯ ಮೇಲೆ
ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದವರು ಕಂಪನಿಯ ನಿರ್ದೇಶಕರಾಗಿದ್ದಾರೆ. ಈ ಸಂಬಂಧ
ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪ್ರಹ್ಲಾದ್ ವಿರುದ್ಧ ಲಿಖಿತ
ದೂರು ನೀಡಿದ್ದಾರೆ’ ಎಂದು ವಿವರಿಸಿದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ‘ಪ್ರಹ್ಲಾದ್ ವಿರುದ್ಧದ ದೂರಿನ ಬಗ್ಗೆ ಮುಖ್ಯ ಆಯುಕ್ತರು ಕೈಗೊಂಡಿರುವ ಕ್ರಮಗಳ ಕುರಿತು ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಬೇಕು’ ಎಂದು ಸೂಚಿಸಿತು. ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.