ADVERTISEMENT

ವೈದ್ಯಕೀಯ ಪಿ.ಜಿ ಸೀಟು ಹಂಚಿಕೆ: ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 21:27 IST
Last Updated 31 ಅಕ್ಟೋಬರ್ 2022, 21:27 IST
   

ಬೆಂಗಳೂರು: 2022–2023ನೇ ಸಾಲಿನಲ್ಲಿಅಲ್ಪಸಂಖ್ಯಾತರ ಖಾಸಗಿ ವೃತ್ತಿಪರ ಕಾಲೇಜುಗಳ ಸಂಘದ ಸದಸ್ಯ ಕಾಲೇಜುಗಳಲ್ಲಿನ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಹಂಚಿಕೆ ಮಾಡಿರುವ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ನಗರದ, ‘ವೈದೇಹಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಅಂಡ್ ರಿಸರ್ಚ್ ಸೆಂಟರ್’ ಹಾಗೂ ಇನ್ನೆರಡು ಮೆಡಿಕಲ್ ಕಾಲೇಜುಗಳು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಲೇವಾರಿ ಮಾಡಿ ಈ ಕುರಿತಂತೆ ಆದೇಶಿಸಿದೆ.

‘ಸೀಟು ಹಂಚಿಕೆ ರೊಟೇಷನ್ ಆಧಾರದಲ್ಲಿ ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿ ವರ್ಷವೂ ವಿವಿಧ ವರ್ಗಗಳಲ್ಲಿ ಸೀಟು ಹಂಚಿಕೆ ಬದಲಾವಣೆಯಾಗುತ್ತದೆ. ಈ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಅರ್ಜಿದಾರರ ಕಾಲೇಜುಗಳೂ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಪಡೆದುಕೊಂಡಿವೆ. ಹೀಗಾಗಿ, ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ಅಭಿಪ್ರಾಯಕ್ಕೆ ಬರಲು ಸಾಧ್ಯವಿಲ್ಲ’ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

‘ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘದ ಸದಸ್ಯರಾಗಿರುವ ಅರ್ಜಿದಾರ ಕಾಲೇಜುಗಳು, ಅನಿವಾಸಿ ಭಾರತೀಯರು (ಎನ್‌ಆರ್‌ಐ) ಮತ್ತು ಮ್ಯಾನೇಜ್‌ಮೆಂಟ್ ಕೋಟಾದಲ್ಲಿನ ಸೀಟುಗಳ ಹಂಚಿಕೆಗೆ ಸಂಬಂಧಿಸಿದಂತೆ ವ್ಯತ್ಯಾಸಗಳಿವೆ. ಆದ್ದರಿಂದ, ಸೀಟು ಹಂಚಿಕೆ ಮತ್ತು ಶುಲ್ಕವನ್ನು ಮರು
ನಿಗದಿ ಮಾಡುವುದಕ್ಕೆ
ನಿರ್ದೇಶಿಸಬೇಕು‘ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.